ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ
ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಕುರಿತು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಆರ್ಥಿಕ ಸ್ವಾತಂತ್ರ್ಯದಲ್ಲಿ ಇಂದಿರಾ ಗಾಂಧಿಯವರ ಕೊಡುಗೆ ಸ್ಮರಣೀಯ ಎಂದು ಹೇಳಿದರು. ರಾಜ್ಯದ ಜನತೆಗೆ ಕನಿಷ್ಠ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮೂದಲಿಸುವುದು ಸರಿಯಲ್ಲ ಎಂದು ಅವರು ಹೇಳಿದರು.
ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ ಎಂದು ಹೇಳಿದರು.
ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಹೆಚ್.ವಿ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ವಿನಃ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಜನಸಮುದಾಯಕ್ಕೆ ಕೊಳ್ಳುವ ಶಕ್ತಿ ಜಾಸ್ತಿ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಕಹ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್. ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷಾ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿವಿಧ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಜಯಂತಿ ಬಿ.ಎ, ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ, ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು.



