ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ಜೆಡಿಎಸ್ ಬೆಂಗಳೂರು ನಗರ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್‌ಕುಮಾರ್ ಎಸ್.ಪಿ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಹಾಲುಮತ ಹಿತರಕ್ಷಣಾ ಪ್ರಾಂಶುಪಾಲರಾದ ಮಂಜುನಾಥ್ ಒಕ್ಕಲಿಗ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಸನ್ನಕುಮಾರ್ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ದೇವೇಗೌಡರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಜುನಾಥ್ ಮತ್ತು ಪ್ರಸನ್ನಕುಮಾರ್ ಅವರು ದೂರವಾಣಿಯಲ್ಲಿ ಮಾತನಾಡುವಾಗ ಹೆಚ್.ಡಿ.ದೇವೇಗೌಡರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾರಿತ್ರ್ಯಹರಣ ಮಾಡಿದ್ದು, ಅನವಶ್ಯಕವಾಗಿ ಜಾತಿಯನ್ನು ಎಳೆದು ತಂದಿದ್ದಾರೆ. ಅಲ್ಲದೆ, ಅವರಿಬ್ಬರ ಸಂಭಾಷಣೆಯು ಫೇಸ್‌ಬುಕ್, ಟ್ವಿಟ್ಟರ್, ಯು-ಟ್ಯೂಬ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಇದು ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ನೋವುಂಟು ಮಾಡಿದೆ ಎಂದು ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಭಾಷಣೆ ವಿಚಾರವನ್ನು ಹರಿಯಬಿಟ್ಟ ವ್ಯಕ್ತಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮ ಜರುಗಿಸಬೇಕು. ವಿಡಿಯೋ ಮತ್ತು ಅದಕ್ಕೆ ಸಂಬಂಧಪಟ್ಟ ಲಿಂಕ್‌ಗಳನ್ನು ಡಿಲೀಟ್ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.



