ವರದಿ :ಸ್ಟೀಫನ್ ಜೇಮ್ಸ್
ಚಿಕ್ಕೋಡಿ
ಚಿಕ್ಕೋಡಿ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಪತಿಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಉಮಾಶ್ರೀ ಹೆಗ್ಗಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿಯ ಆತ್ಮಹತ್ಯೆಯ ಸುದ್ದಿ ತಿಳಿದ ನಂತರ ಪತಿ ಲಗಮಣ್ಣ ಹೆಗ್ಗಣ್ಣವರ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.
ಉಮಾಶ್ರೀ ಮತ್ತು ಲಗಮಣ್ಣ ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆದರೆ ಇತ್ತೀಚಿನ ಕೆಲ ದಿನಗಳಿಂದ ಮನೆಯೊಳಗೆ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲೇ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



