ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಹಾಗೂ ಕರ್ನಾಟಕದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಜನವರಿ 16 ರಂದು ತಡರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಸ್ವಗೃಹದಲ್ಲಿ ಲೋಕನಾಯಕ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ.
ಕರ್ನಾಟಕದ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ತಂದೆ, ಸಂಸದ ಸಾಗರ ಖಂಡ್ರೆಯವರ ಅಜ್ಜ ಭೀಮಣ್ಣ ಖಂಡ್ರೆ ತಮ್ಮ 103ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು, ಇವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ರಾಜಕೀಯ ನಾಯಕರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ಅವರು ದೀರ್ಘಾವಧಿಯಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಕಳೆದ 4-5 ದಿನಗಳಿಂದ ಭಾಲ್ಕಿಯ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶುಕ್ರವಾರ ರಾತ್ರಿ 10.50ರ ಸುಮಾರಿಗೆ ಭೀಮಣ್ಣ ಖಂಡ್ರೆ ಅವರು ಕೊನೆಯುಸಿರೆಳೆದಿದ್ದು, ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಅಲ್ಲದೆ ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ. ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದು, ಸಂಪುಟ ಸಹದ್ಯೋಗಿಗಳಾದ ಮಾನ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರದ ಸಚಿವರಾದ ಈಶ್ವರ್ ಖಂಡ್ರೆ ಅವರ ತಂದೆಯವರಾದ ಡಾ.ಭೀಮಣ್ಣ ಖಂಡ್ರೆ ಅವರು, ನಮ್ಮ ಸಮಾಜದ ಹಿರಿಯ ಮುಖಂಡರಾಗಿದ್ದರು. ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು ಎಂದು ಹೇಳಿದ್ದಾರೆ.

ಅಲ್ಲದೆ ಡಾ. ಭೀಮಣ್ಣ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು ಎಂದು ಸ್ಮರಿಸಿದ್ದಾರೆ. ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಖಂಡ್ರೆ ಕುಟುಂಬಸ್ಥರಿಗೆ ಅಗಲಿಕೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ನಾಡಿನ ಹಿರಿಯ ನಾಯಕರು, ದೇಶದ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ – ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಧೀಮಂತ ಹೋರಾಟಗಾರರು, ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಅಗಲಿದ ಹಿರಿಯ ಜೀವಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಮತ್ತು ಅವರ ಪುತ್ರರಾದ ಸಚಿವ ಈಶ್ವರ್ ಖಂಡ್ರೆ ಹಾಗೂ ಎಲ್ಲ ಕುಟುಂಬ ಸದಸ್ಯರಿಗೆ, ಬಂಧು-ಮಿತ್ರರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.



