ಬೆಂಗಳೂರು : ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಪಟ್ಟು ಬಿಡದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಬೆನ್ನು ಬಿದ್ದಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.
ಬೀದರ್‌ನಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನ ಪಡೆದ ಬಳಿಕ ಮತ್ತೆ ದೆಹಲಿಗೆ ತೆರಳಿದ್ದ ಡಿಕೆಶಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸತತ ಪ್ರಯತ್ನ ನಡೆಸಿದ್ದು, ರಾಹುಲ್ ಗಾಂಧಿ ಉದ್ದೇಶ ಪೂರ್ವಕವಾಗಿಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖಾಮುಖಿ ಭೇಟಿ ಮಾಡದೆ ತಪ್ಪಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ 2023ರ ವಿಧಾನಸಭೆ ಚುನಾವಣೆ ಬಳಿಕ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ್ದರು. ಆ ವೇಳೆ ಎರಡುವರೆ ವರ್ಷಗಳವರೆಗೂ ಸದ್ಯಕ್ಕೆ ನಾನು ಹೇಳಿದ್ದನ್ನು ಒಪ್ಪಿಕೊಳ್ಳಿ, ನಂತರ ಸೂಕ್ತ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದರು ಎನ್ನಲಾಗಿದ್ದು, ರಾಹುಲ್ ಗಾಂಧಿ ಮಾತಿಗೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಆ ವೇಳೆ ಸಹಮತ ಸೂಚಿಸಿದ್ದರು ಎಂಬ ಮಾಹಿತಿಗಳಿವೆ.
ನೇರವಾಗಿ ಯಾವುದೇ ಒಪ್ಪಂದ ಆಗದೆ ಇದ್ದರೂ, ಎರಡೂವರೆ ವರ್ಷದ ಬಳಿಕ ನಾಯಕತ್ವದ ಬಗ್ಗೆ ಪುನರ್ ಪರಿಶೀಲನೆ ನಡೆಸುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನೇ ಇಬ್ಬರು ನಾಯಕರು ನಂಬಿದ್ದು, ಈ ಕಾರಣಕ್ಕಾಗಿಯೇ ಸಿದ್ದರಾಮಯ್ಯ, ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ.
ಇನ್ನೂ ಆ ಸಂದರ್ಭದಲ್ಲಿ ತಮಗೆ ಕೊಟ್ಟಿದ್ದ ಮಾತನ್ನು ಈಡೇರಿಸಬೇಕು ಎಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದು, ದೆಹಲಿಯಲ್ಲೇ ಬೀಡು ಬಿಟ್ಟು ರಾಹುಲ್ ಗಾಂಧಿಯವರ ಭೇಟಿಗೆ ಸತತ ಪ್ರಯತ್ನ ನಡೆಸುತ್ತಿದ್ದಾರೆ.
ಇತ್ತ ಈ ನಡುವೆ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು ಜ.27ರಂದು ರಾಜ್ಯದಲ್ಲಿಯೂ ಪಂಚಾಯತ್ ಮಟ್ಟದಿಂದಲೂ ಬೃಹತ್ ಪ್ರತಿಭಟನಾ ಆಂದೋಲನಕ್ಕೆ ಚಾಲನೆ ನೀಡಲಾಗುತ್ತದೆ.
ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಸಂಘಟನಾತಕ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಆ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಮುಖಾಮುಖಿ ಕೂರಿಸಿ ಬೆಂಗಳೂರಿನಲ್ಲೇ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನೂ ಮನ್ರೇಗಾ ಯೋಜನೆ ರದ್ದುಗೊಂಡಿರುವುದರ ವಿರುದ್ಧ ಹೋರಾಟ ರೂಪಿಸಲು ನಡೆಯುತ್ತಿರುವ ಸರಣಿ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ಇದ್ದರೂ ನೇರವಾಗಿ ಭಾಗಿಯಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿರುವುದು ಕೂಡ ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು, ಬೆಂಗಳೂರಿನಿಂದಲೇ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಬಹುದಿತ್ತು. ಆದಾಗೀಯೂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಉಳಿದಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಅಧಿಕಾರ ಹಂಚಿಕೆಯ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಲವು ಬಾರಿ ಭೇಟಿ ಮಾಡಿ ತಮ್ಮ ಆಗ್ರಹವನ್ನು ಮಂಡಿಸಿದ್ದು, ಹೈಕಮಾಂಡ್ ನ ಎಲ್ಲಾ ನಾಯಕರು ರಾಹುಲ್ ಗಾಂಧಿಯವರತ್ತಲೇ ಬೊಟ್ಟು ಮಾಡುತ್ತಿರುವುದರಿಂದ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ಉಳಿದಿದ್ದಾರೆ. ಯಾವ ಕ್ಷಣದಲ್ಲಿ ಅವಕಾಶ ಸಿಕ್ಕರೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಹವಣಿಸುತ್ತಿದ್ದಾರೆ ಎನ್ನಲಾಗಿದೆ.



