Tuesday, January 27, 2026
Google search engine

Homeರಾಜ್ಯಮಹಾತ್ಮ ಗಾಂಧಿ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ: ಡಿಕೆಶಿ

ಮಹಾತ್ಮ ಗಾಂಧಿ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ: ಡಿಕೆಶಿ

ಬೆಂಗಳೂರು : ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮನ್‌ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದ್ದು, ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಂಡು, ಉದ್ಯೋಗದ ಹಕ್ಕನ್ನು ಬಡವರಿಂದ ಕಿತ್ತುಕೊಳ್ಳುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. ಮನ್‌ರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ರಾಜಭವನಕ್ಕೆ ತೆರಳುತ್ತೇವೆ. ಅಗತ್ಯವಿದ್ದರೆ ಬಂಧನಕ್ಕೂ ಸಿದ್ಧವಾಗಿದ್ದೇವೆ ಎಂದು ಹೇಳಿದರು. ರಾಜ್ಯಪಾಲರು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಎಂಬ ಯೋಜನೆಯನ್ನು ಜಾರಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಈ ಯೋಜನೆಯಲ್ಲಿ ರಾಮ ಎಂಬುದು ಕೇವಲ ಹೆಸರಿನಷ್ಟೇ, ಬಡವರ ಹಿತದ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದರು. ದಶರಥ ರಾಮ, ಕೌಸಲ್ಯ ರಾಮ ಅಥವಾ ಸೀತಾರಾಮ ಯಾರೂ ಈ ಕಾಯ್ದೆಯಲ್ಲಿ ಇಲ್ಲ ಎಂದು ವ್ಯಂಗ್ಯವಾಡಿದರು.

ಬಡವರು, ದಲಿತರು ಮತ್ತು ರೈತರ ಪರ ನಿಜವಾಗಿ ಹೋರಾಟ ಮಾಡುವ ಪಕ್ಷ ಕಾಂಗ್ರೆಸ್ ಮಾತ್ರ. ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದು, ಇದಕ್ಕೆ ಆರ್‌ಎಸ್‌ಎಸ್ ಮಾರ್ಗದರ್ಶನ ನೀಡುತ್ತಿದೆ ಎಂದು ಸಿಎಂ ಆರೋಪಿಸಿದರು. ಮನ್​ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಲೋಕಭವನದಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

RELATED ARTICLES
- Advertisment -
Google search engine

Most Popular