ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚು ಅರಣ್ಯ ಪ್ರದೇಶಗಳಿದ್ದು, ಅರಣ್ಯ ಪ್ರದೇಶದಲ್ಲಿ ವಾಸಿಸುವ ಪರಿಶಿಷ್ಟ ಪಂಗಡಗಳು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳು ತಲೆಮಾರುಗಳಿಂದ ವಾಸಿಸುತ್ತಿದ್ದಾರೆ. ಅರಣ್ಯ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅರಣ್ಯ ಹಕ್ಕು ಕಾಯ್ದೆಯ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ – 2006 (ನಿಯಮ – 2007ರ 2) ಮತ್ತು ನಿಯಮಗಳು 2008 (ನಿಯಮಗಳ ತಿದ್ದುಪಡಿ – 2012) ಅನುμÁ್ಠನ ಕುರಿತು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾ ಮತ್ತು ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಸದಸ್ಯರಿಗೆ ಆಯೋಜಿಸಿದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬುಡಕಟ್ಟು ಸಮುದಾಯಗಳು ಮತ್ತು ಅರಣ್ಯ ನಿವಾಸಿಗಳ ಹಕ್ಕುಗಳ ರಕ್ಷಣೆಗೆ ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಇಲಾಖೆಗಳ ಸಮನ್ವಯದ ಕೊರತೆಯಿಂದ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಇರುತ್ತದೆ. ಅರಣ್ಯ ಹಕ್ಕುಗಳ ಕಾಯ್ದೆಯ ಮಾಹಿತಿಯ ಕೊರತೆಯಿಂದ ಅರಣ್ಯವಾಸಿಗಳು ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸಲ್ಲಿಕೆಯಾದ ಅರ್ಜಿಯನ್ನು ಪರಿಶೀಲಿಸಿ ಇತ್ಯರ್ಥಪಡಿಸಲು ಅರಣ್ಯ ಹಕ್ಕು ಕಾಯ್ದೆಯ ಬಗ್ಗೆ ಸೂಕ್ತ ಮಾಹಿತಿ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯ ಹಕ್ಕು ಕಾಯ್ದೆ ಕುರಿತು ಒಡಿಶಾದಿಂದ ಆಗಮಿಸಿದ ವಿಷಯ ತಜ್ಞ ವೈ ಗಿರಿರಾವ್ ಮಾತನಾಡಿ, ಅರಣ್ಯ ಹಕ್ಕುಗಳನ್ನು ಗುರುತಿಸಲು ಮತ್ತು ಅರ್ಜಿಯನ್ನು ಪರಿಶೀಲಿಸಲು ಗ್ರಾಮ ಸಭೆಯು ಮಹತ್ವದ ಪಾತ್ರ ವಹಿಸುತ್ತದೆ. ಬ್ರಿಟಿμï ಆಳ್ವಿಕೆಯ ನಂತರ ಅರಣ್ಯವಾಸಿಗಳು ಅರಣ್ಯದಲ್ಲಿ ವಾಸಿಸುತ್ತಿದ್ದರು ಅವರಿಗೆ ಹಕ್ಕುಗಳನ್ನು ನೀಡುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದಿದೆ ಎಂದು ಅವರು ಹೇಳಿದರು. ಅರಣ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ಬುಡಕಟ್ಟು ಅಭಿವೃದ್ಧಿ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. ಅಧಿಕಾರಿಗಳು ಅರಣ್ಯವಾಸಿಗಳಿಗೆ ಭೂಮಿಯ ಹಕ್ಕು ನೀಡುವುದರ ಜೊತೆಗೆ, ಅವರ ಸಾಂಪ್ರದಾಯಿಕ ಹಕ್ಕುಗಳನ್ನು ಸಾಂವಿಧಾನಿಕವಾಗಿ ಮಾನ್ಯ ಮಾಡಲು ಸಹಕರಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಉಡುಪಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಬಸವರಾಜು ಹೆಚ್.ಸಿ, ಪ್ರಿಯಾಂಕ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಹೇಮಲತಾ ಎಂ ನಿರೂಪಿಸಿದರು.
- ಮಂಗಳೂರಿನಿಂದ ಶಂಶೀರ್ ಬುಡೋಳಿ



