ಗುಂಡ್ಲುಪೇಟೆ: ಕಿಡಿಗೇಡಿಗಳು ಟೊಮೊಟೋ ಫಸಲು ನಾಶ ಪಡಿಸಿದ ಕೆಬ್ಬೇಪುರ ಗ್ರಾಮದಲ್ಲಿ ಜಮೀನಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈತನಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಈ ವೇಳೆ ರೈತ ಮಂಜುನಾಥ್, ಒಂದೂವರೆ ಎಕರೆ ಜಮೀನಿನಲ್ಲಿ ಸುಮಾರು 1 ಲಕ್ಷಕ್ಕು ಹೆಚ್ಚು ಹಣವನ್ನು ಖರ್ಚು ಮಾಡಿ ಟೊಮೊಟೋ ಬೆಳೆಯಲಾಗಿತ್ತು. ಆದರೆ ಕಿಡಿಗೇಡಿಗಳು ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿರುವ ಹಿನ್ನಲೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದರಿಂದ 15 ಲಕ್ಷಕ್ಕೂ ಅಧಿಕ ಹಣ ನಷ್ಟವಾದಂತಾಗಿದೆ. ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಶಾಸಕರ ಮುಂದೆ ಅಳಲು ತೋಡಿಕೊಂಡರು.
ಈ ಸಂದರ್ಭ ಶಾಸಕ ಎಚ್.ಎಂ.ಗಣೇಶಪ್ರಸಾದ್, ಬೇಗೂರು ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗೆ ಕರೆ ಮಾಡಿ ಘಟನೆಗೆ ಕಾರಣರಾಗಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಸೂಚಿಸಿದರು. ತೋಟಗಾರಿಕೆ ಹಾಗು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಕ್ಷಣವೇ ಬೆಳೆ ಪರಿಹಾರ ನೀಡುವ ಬಗ್ಗೆ ಸರ್ವೇ ಮಾಡಿ, ಸರ್ಕಾರಕ್ಕೆ ಕಳುಹಿಸಿಕೊಡಿ, ಸಿಎಂ ಅವರ ಅನುದಾನ ದಡಿಯಲ್ಲಿ ಹೆಚ್ಚಿನ ಪರಿಹಾರವನ್ನು ರೈತನಿಗೆ ತಲುಪಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ನಂತರ ಶಾಸಕ ಎಚ್.ಎಂ.ಗಣೇಶಪ್ರಸಾದ್, ಕೆಬ್ಬೇಪುರ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಹದೇವಮ್ಮ ಅವರಿಗೆ ಸೇರಿದ 14 ಕುರಿ ಹಾಗೂ ಮಹದೇವಪ್ಪ ಎಂಬುವವರಿಗೆ ಸೇರಿದ 10 ಕುರಿಗಳು ಸಾವಿಗೀಡಿದ್ದ ಸ್ಥಳಕ್ಕೆ ಭೇಟಿ ನೀಡಿ ವೈಯಕ್ತಿಕ ಪರಿಹಾರ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ಮುಖಂಡರಾದ ಹರೀಶ್, ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.