ಕೆ.ಆರ್.ಪೇಟೆ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ, ನೌಕರರ ಬೇಡಿಕೆ ಈಡೇರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು, ಬೇಡಿಕೆಗಳ ಈಡೇರಿಕಾಗಿ ಒತ್ತಾಯಿಸಿ ಇಲಾಖೆ ಎಲ್ಲಾ ವೃಂದ ಸಂಘಗಳ ಸಹಯೋಗದೊಂದಿಗೆ ಮಾ.11 ರಿಂದ 15 ರವರೆಗೆ ಐದು ದಿನಗಳ ಕಾಲ ಮೊದಲ ಹಂತದ ಮುಷ್ಕರ ಮಾಡುವುದಾಗಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘ ತಿಳಿಸಿದೆ.
ಈ ಬಗ್ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳು ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.
ಇನ್ನೂ ಎರಡನೇ ಹಂತದಲ್ಲಿ ಮಾ.16 ರಿಂದ ಬೇಡಿಕೆ ಈಡೇರುವವರೆಗೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟ ಕಾಲದ ಮುಷ್ಕರ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. 12 ಬೇಡಿಕೆಗಳನ್ನು ನೌಕರರು ಸರ್ಕಾರದ ಮುಂದಿಟ್ಟು ಪ್ರತಿಭಟನೆ ಎಚ್ಚರಿಕೆ ನೀಡಿದ್ದೇವೆ. ಈ ಬಗ್ಗೆ ಶಾಸಕ ಹೆಚ್.ಟಿ.ಮಂಜು ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ವೇಳೆ ಸರ್ಕಾರಿ ವೈದ್ಯಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎಸ್.ಸಾಗರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳ ಇದ್ದರು.



