ಹಾವೇರಿ : ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಇತ್ತೀಚಿನ ಹೇಳಿಕೆಗಳಿಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಹರಿಪ್ರಸಾದ್ ಅವರು ತಮ್ಮ ಹಳೆಯ ಅನುಭವದ ಹಿನ್ನೆಲೆಯಿಂದಲೇ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರದ ದೇಣಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷ ತನ್ನ ಇತಿಹಾಸವನ್ನು ಮೊದಲು ಪರಿಶೀಲಿಸಿಕೊಳ್ಳಬೇಕು. ದೇಶದಲ್ಲಿ ಸಿಖ್ಖರ ನರಮೇಧ ನಡೆದಿದ್ದು ಕಾಂಗ್ರೆಸ್ ಆಡಳಿತಾವಧಿಯಲ್ಲೇ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು ಎಂಬ ರಾಜಕೀಯ ಸಂಸ್ಕೃತಿ ಮತ್ತು ಜವಾಬ್ದಾರಿಯನ್ನು ಹರಿಪ್ರಸಾದ್ ಅವರು ಪಾಲಿಸುತ್ತಿಲ್ಲ ಎಂದು ಜೋಶಿ ಟೀಕಿಸಿದರು.
ರಾಮಮಂದಿರದ ದೇಣಿಗೆ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಈಗಾಗಲೇ ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಆದರೆ ಮೂಲ ವಿಷಯವನ್ನು ಬದಿಗಿಟ್ಟು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೊಹಮ್ಮದ್ ಘಜ್ನಿಗೆ ಹೋಲಿಸುವುದು ಕಾಂಗ್ರೆಸ್ ನಾಯಕರ ಮನೋಭಾವವನ್ನು ತೋರಿಸುತ್ತದೆ ಎಂದು ಅವರು ಕಿಡಿಕಾರಿದರು.



