ಮಂಗಳೂರು(ದಕ್ಷಿಣ ಕನ್ನಡ): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮೊಹಮ್ಮದ್ ನೌಷದ್ @ ಉಲ್ಲಂಜೆ ನೌಷದ್(28),ಎಂಬಾತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೀಯಾಪದವು ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಈತನು ಈ ಹಿಂದೆ 2018 ರಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ, ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ, ಕರ್ತವ್ಯದಲ್ಲಿದ್ದ ಪೊಲೀಸರ ಕೊಲೆ ಯತ್ನ ನಡೆಸಿದ ಪ್ರಕರಣ ಹಾಗೂ ಮಹಿಳಾ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿದ್ದನು.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ ಐಯವರಾದ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.