Friday, April 11, 2025
Google search engine

Homeರಾಜ್ಯಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಹೆಡ್​ ಕಾನ್ಸ್ ​ಟೇಬಲ್ ಟ್ರ್ಯಾಕ್ಟರ್ ಹರಿದು ಸಾವು

ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಹೆಡ್​ ಕಾನ್ಸ್ ​ಟೇಬಲ್ ಟ್ರ್ಯಾಕ್ಟರ್ ಹರಿದು ಸಾವು

ಕಲಬುರಗಿ: ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಹೆಡ್​ ಕಾನ್ಸ್ ​ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದ್ದು, ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಮಯೂರ್ ಚೌಹಾಣ್ (51) ಮೃತ ಅಧಿಕಾರಿ.

ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಹುಲ್ಲೂರ್ ಬಳಿ ಚೆಕ್ ಪೋಸ್ಟ್​ ಹಾಕಲಾಗಿತ್ತು. ರಾತ್ರಿ ಮರಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮೈ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ ​ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಂತರ ಇದು ಉದ್ದೇಶಪೂರಿತವೋ ಅಥವಾ ಆಕಸ್ಮಿಕವೋ ಎನ್ನುವುದು ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಸಾಂತ್ವಾನ

“ಅಕ್ರಮ ಮರುಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಕಾನ್ಸ್​ಟೇಬಲ್​ ಸಾವನ್ನಪ್ಪಿರುವ ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಪತ್ರಿಕಾ ಹೇಳಿಕೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ ಟೇಬಲ್ ಮಯೂರ ಚೌಹಾಣ್ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿ, ತನಿಖೆಗೆ ಆದೇಶಿಸಿದ್ದೇನೆ. ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಣೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕೂಡ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಹಾಗೂ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿ, ಕೂಡಲೇ ಅಕ್ರಮ ಮರುಳು ಸಾಗಾಣಿಕೆ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular