ಮಂಗಳೂರು: ನಗರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಮಕ್ಕಳಿಗೆ ಕೀಟಲೆ ನೀಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ತಳ್ಳುಗಾಡಿ ಕೆಲಸಗಾರರ ವಿರುದ್ಧ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿತರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅತ್ತಾವರ ಬಳಿ ತಳ್ಳುಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮರ್ ಮತ್ತು ಸೂರಜ್ ಬಂಧಿತರು. ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಪೊಲೀಸ್ ಫೋನ್ ಇನ್ ಕಾರ್ಯಕ್ರಮವು ನಡೆದಿತ್ತು. ಇದೇ ವೇಳೆ 56ರ ಹರೆಯದ ವ್ಯಕ್ತಿಯೊಬ್ಬರು ಕರೆ ಮಾಡಿ ಅತ್ತಾವರದಲ್ಲಿ ನನ್ನ ಮಕ್ಕಳು ನಡೆದುಕೊಂಡು ಹೋಗುತ್ತಿರುವಾಗ ತಳ್ಳುಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಅವರನ್ನು ಹಿಂಬಾಲಿಸಿಕೊಂಡು ಹೋಗಿ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ ಎಂದು ದೂರಿಕೊಂಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಿಕೊಂಡರು. ಅಲ್ಲದೆ ಕೆಲವೇ ಗಂಟೆಯೊಳಗೆ ಆರೋಪಿಗಳಾದ ಅಮರ್ ಮತ್ತು ಸೂರಜ್‌ರನ್ನು ವಶಕ್ಕೆ ಪಡೆಯಲಾಯಿತು. ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಅವರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.