ಶಿವಮೊಗ್ಗ : ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತವು ಆಯೋಜಿಸಲಾಗಿದ್ದ ಜನ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಆಲಿಸುವ ಜನರ ಸಮಸ್ಯೆಗಳಿಗೆ ಸರ್ಕಾರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಲಿದ್ದಾರೆ. ಜನಪರವಾಗಿರುವ ಈ ಕಾರ್ಯಕ್ರಮ ಜನಸ್ನೇಹಿಯಾಗಿದೆ ಎಂದವರು ನುಡಿದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವಂತೆ ಸೂಚಿಸಿದ ಅವರು ಇಲಾಖೆಗಳು ಜನಸ್ನೇಹಿಯಾಗಿರಬೇಕು ಎಂದರು. ಕೆಲವು ಜಟಿಲವಾದ ಹಾಗೂ ಇತ್ಯರ್ಥವಾಗದ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆ ಪಡೆಯಬೇಕು. ಅಗತ್ಯವಿದ್ದಲ್ಲಿ ಸಚಿವರ ಗಮನ ಸೆಳೆಯುವಂತೆ ಅವರು ಸಲಹೆ ನೀಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಗಾಜನೂರಿನ ವಿಕಲಚೇತನ ಸತ್ಯನಾರಾಯಣ ಅವರು ಸಚಿವರಿಗೆ ಮನವಿ ಸಲ್ಲಿಸಿ, ತಮ್ಮ ಮನೆ ಮತ್ತು ಜಮೀನಿಗೆ ಕಾಲುದಾರಿ ಬಿಡಿಸಿಕೊಡುವಂತೆ ಈಗಾಗಲೇ ಕಂದಾಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದರು. ಸಚಿವರು ತಕ್ಷಣ ಪ್ರತಿಕ್ರಿಯಿಸಿ, ಅರ್ಜಿದಾರರಿಗೆ ಕೂಡಲೇ ಸ್ಪಂದಿಸಬೇಕು ಈ ಕಾರ್ಯದಲ್ಲಿ ನಿರ್ಲಕ್ಷದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.