ಹನೂರು: ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಿಂದ ಯಾವೊಬ್ಬ ಅರ್ಹ ಫಲಾನುಭವಿಯು ವಂಚಿತವಾಗಬಾರದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಆರ್.ನರೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದಾರೆ ಎಂದರು.
ಮಹಿಳೆಯರಿಗೆ ಮಾಸಿಕ 2ಸಾವಿರ ರೂ ನೀಡುವ ಗೃಹಲಕ್ಷ್ಮಿ ಯೋಜನೆಯ ಹಣ ಕೆಲ ಫಲಾನುಭವಿಗಳಿಗೆ ತಲುಪಿಲ್ಲ. ಪಡಿತರ ಚೀಡಿಯಲ್ಲಿನ ವ್ಯತ್ಯಾಸ, ಆಧಾರ್ ಕಾರ್ಡಿನ ವ್ಯತ್ಯಾಸ ಅಥವಾ ಬ್ಯಾಂಕ್ ಖಾತೆಯಲ್ಲಿನ ಮಾಹಿತಿ ವ್ಯತ್ಯಾಸದಿಂದಾಗಿ ಕೆಲವರಿಗೆ ಹಣ ವರ್ಗಾವಣೆಯಾಗಿಲ್ಲ. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳು ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ಳಬೇಕು. ಇದಕ್ಕೆ ಅಗತ್ಯ ಸಹಕಾರ ನೀಡಲು ಮತ್ತು ಫಲಾನುಭವಿಗಳಿಗೆ ಮಾಹಿತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಮುಖಂಡರು ಸಹಕರಿಸಿ: ಕೆಲ ಮಹಿಳೆಯರು ಮತ್ತು ವೃದ್ಧೆಯರು ಗೃಹಲಕ್ಷ್ಮಿ ಯೋಜನೆಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಹಣ ಪಾವತಿಯಾಗದೆ ಯಾರನ್ನು ಸಂಪರ್ಕಿಸಬೇಕು ಎಂದು ತಿಳಿಯದೆ ಕಚೇರಿಗಳಿಗೆ, ಬ್ಯಾಂಕುಗಳಿಗೆ ಅಲೆದಾಡುತ್ತಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಮಾಹಿತಿ ಸಂಗ್ರಹಿಸಿ ಪಟ್ಟಿ ನೀಡಿದಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಯೋಜನೆಯ ಲಾಭ ದೊರಕಿಸಿಕೊಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಿಕ್ಕತಮ್ಮಯ್ಯ, ಮಾದೇಶ್, ಎಲ್ಲೇಮಾಳ ಮಾದೇವು ಹಾಗೂ ಇನ್ನಿತರರು ಹಾಜರಿದ್ದರು.