ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷೆ ವಿ.ಪಿ.ಸುಶೀಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.
ಶನಿವಾರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಇಡೀ ದೇಶ ಮತ್ತು ಸಂಸತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನದಂತೆ ನಡೆಯುತ್ತಿದೆ. ಅಂತಹ ಸಂಸತ್ತಿನಲ್ಲಿ ಡಾ.ಅಂಬೇಡ್ಕರ್ ಅವರ ಹೆಸರಿಗೆ ಧಕ್ಕೆ ಬರುವಂತೆ ಮಾತನಾಡಿದ್ದು ದೇಶದ್ರೋಹದ ಕೆಲಸ. ಅಂಬೇಡ್ಕರ್ ಅವರು ಈ ದೇಶದ ಸರ್ವ ಜನಾಂಗದವರ ಒಳಿತಿಗಾಗಿ ತಮ್ಮ ಜೀವನ ತ್ಯಾಗ ಮಾಡಿ ಸಂವಿಧಾನವನ್ನು ನಮಗೆ ಕೊಟ್ಟಿದ್ದಾರೆ. ದೇಶದ ಜನರಿಗೆ ಮೂಲಭೂತ ಹಕ್ಕುಗಳು, ಮಹಿಳೆಯರಿಗೆ ಮತದಾನದ ಹಕ್ಕು, ಸಮಾನತೆಯ ಹಕ್ಕನ್ನು ಕೊಟ್ಟಿದ್ದಾರೆ. ಅಂಬೇಡ್ಕರ್ ಅವರು ಈ ದೇಶದ ಬೆಳಕು. ಅಂತಹ ಮಹಾ ಜ್ಞಾನಿ ವಿರುದ್ಧ ಮಾತನಾಡಿದ್ದು, ಸಂವಿಧಾನಕ್ಕೆ ಅಪಚಾರ ಮಾಡಿದಂತೆ ಕೂಡಲೇ ಅಮಿತ್ ಶಾ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕು. ಅಥವಾ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು.
ಇಲ್ಲವೇ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಸುಶೀಲಾ ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷ ಡಾ.ಉಮಾಪತಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಸಂಸತ್ತಿನಲ್ಲಿ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಮಾಡಿ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟರಾಜು, ಉಪಾಧ್ಯಕ್ಷ ಚಾಮರಾಜು, ಮೈಸೂರು ಜಿಲ್ಲಾ ಅಧ್ಯಕ್ಷ ಎಸ್.ಕೆ.ಸುದರ್ಶನ್, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಲತಾ ಕುಮಾರ್, ಪ್ರಸಾದ್ ಮತ್ತಿತರರು ಇದ್ದರು.