ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಭರ್ಜರಿ ಗೆಲುವು ಸಾಧಿಸಿದೆ. ಈ ಪೈಕಿ ತೀವ್ರ ಪೈಪೋಟಿಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಜಯಭೇರಿ ಬಾರಿಸಿದ್ದಾರೆ. ಪಠಾಣ್ ಗೆದ್ದ ಬೆನ್ನಲ್ಲೇ ಬಂಡಾಯವಾಗಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿಗೆ ರಾಜ್ಯ ಸರಕಾರ ಹೆಸ್ಕಾಂ ಅಧ್ಯಕ್ಷ ಸ್ಥಾನ ನೀಡಿದೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಖಾದ್ರಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಖಾದ್ರಿಗೆ ಉತ್ತಮ ಸ್ಥಾನಮಾನದ ಭರವಸೆ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದರು. ಭರವಸೆ ಬೆನ್ನಲ್ಲೇ ಖಾದ್ರಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್‌ಗೆ ಬೆಂಬಲ ಸೂಚಿಸಿದ್ದರು.
ಅದರಂತೆಯೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಬೆನ್ನಿಗೆ ನಿಂತು ಗೆಲ್ಲಿಸಿದ್ದರು. ಇದೀಗ ಕೊಟ್ಟ ಮಾತಿನಂತೆಯೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.