Friday, April 18, 2025
Google search engine

Homeರಾಜ್ಯಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ...

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಲಾಂಛನ ಬಳಸಲು ಸಚಿವ ಶಿವರಾಜ ತಂಗಡಗಿ ಸೂಚನೆ

ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಹಾಗೂ ಆಯೋಜಿಸಲಾಗುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಲಾಂಛನವನ್ನು ಕಡ್ಡಾಯವಾಗಿ ಬಳಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಅವರು ಇಂದು ವಿಕಾಸಸೌಧದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಜಂಟಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಮ್ಮೇಳನದ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಾಹಿತ್ಯ ಸಮ್ಮೇಳನ ನಡೆಸಲು ಸೂಕ್ತ ಸ್ಥಳಾವಕಾಶವನ್ನು ಗುರುತಿಸಬೇಕಿದೆ. ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ವಾಹನ ನಿಲುಗಡೆಯ ಸ್ಥಳಗಳು ಹೆಚ್ಚು ಅಂತರದಲ್ಲಿದ್ದರೆ, ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಈ ಎರಡೂ ಸ್ಥಳಗಳು ಸಮೀಪವಿರುವಂತೆ ನೋಡಿಕೊಳ್ಳಬೇಕೆಂದು ಅವರು ಹೇಳಿದರು.

ಸಾಹಿತ್ಯ ಸಮ್ಮೇಳನಕ್ಕೆ ಒಟ್ಟು ರೂ.30.00 ಕೋಟಿ ಅನುದಾನ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೋರಿದ್ದಾರೆ. ಈ ಬಗ್ಗೆ ಸರ್ಕಾರ ಶೀಘ್ರವೇ ಕ್ರಮಕೈಗೊಂಡು ತಿಳಿಸಲಾಗುವುದು ಎಂದು ಅವರು ಹೇಳಿದರು. ಕಾರ್ಯಕ್ರಮದ ಆಯೋಜನೆಯ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಲು ಸಹ ಅವರು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಈಗಾಗಲೇ ಸಮ್ಮೇಳನ ಆಯೋಜನೆಗೆ ಎರಡು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಇದರಲ್ಲಿ ಯಾವುದು ಸೂಕ್ತ ಎಂಬುದನ್ನು ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಧರಿಸಲಿ. ಆದಷ್ಟು ಶೀಘ್ರವಾಗಿ ಸ್ಥಳ ನಿಗದಿಯಾದರೆ, ಅಲ್ಲಿಗೆ ಬೇಕಾದ ಅನುಕೂಲಗಳನ್ನು ಕಲ್ಪಿಸುವ ಕೆಲಸವನ್ನು ಆರಂಭಿಸಬಹುದು ಎಂದರು. ಜೊತೆಗೆ ಇಡೀ ಮಂಡ್ಯ ಸಾಹಿತ್ಯ ಸಮ್ಮೇಳನದ ಸಡಗರವನ್ನು ಸಂಭ್ರಮಿಸುವಂತೆ ಮಾಡಲು ನಗರದ ಎಲ್ಲಾ ಭಾಗಗಳು ಹಾಗೂ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯ ನಡುವೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಮತ್ತು ನಗರವನ್ನು ಸಿಂಗರಿಸುವ ಹಾಗೆ ತಯಾರಿಗಳು ಆಗಬೇಕು ಎಂದರು.

ಸಭೆಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಅದರದೇ ವಿಶೇಷ ಮಹತ್ವವಿದೆ. ಈ ಸಮ್ಮೇಳನಕ್ಕೆ ಅಮೇರಿಕಾದಿಂದ ಅನೇಕ ಗಣ್ಯರು ಆಗಮಿಸುತ್ತಾರೆ. 87ನೇ ಸಮ್ಮೇಳನವಾಗಿರುವುದರಿಂದ 87 ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ದಿನೇಶ್ ಗೂಳಿಗೌಡ,   ಉದಯ ಕೆ.ಎಂ, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಮಂಡ್ಯ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಡಾ. ಬಿಎಂ ಪಟೇಲ್ ವಿಳಂದು, ನೇ.ಭ. ರಾಮಲಿಂಗಶೆಟ್ಟಿ ಸೇರಿದಂತೆ ಅನೇಕ ಅಧಿಕಾರಿಗಳು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular