ದಾವಣಗೆರೆ : ಜಿಲ್ಲೆಯ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಲೇಜು ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.
ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರಿನಲ್ಲಿ ಉಪನ್ಯಾಸಕ ಮಲ್ಲಿಕಾರ್ಜುನ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ನಿರಂತರವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಪಾಠ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಖಾಸಗಿ ವಿಷಯಗಳ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ಕಾಲೇಜಿನಲ್ಲಿ ಇತರ ವಿದ್ಯಾರ್ಥಿಗಳು ತೆರಳಿದ ಬಳಿಕ ಒಬ್ಬರೇ ಕೊಠಡಿಯಲ್ಲಿ ಇರುವಂತೆ ಒತ್ತಾಯಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಇದೇ ರೀತಿಯಲ್ಲಿ ಇತರ ವಿದ್ಯಾರ್ಥಿನಿಯರಿಗೂ ತೊಂದರೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇನ್ನೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು, ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಉಪನ್ಯಾಸಕ ಮಲ್ಲಿಕಾರ್ಜುನ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿನಿಯರ ಸುರಕ್ಷತೆ ದೃಷ್ಟಿಯಿಂದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



