ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಗಂಭೀರ ಆರೋಪ ಕೇಳಿ ಬಂದಿದ್ದು, ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಈ ಕುರಿತು ಉನ್ನತ ಮಟ್ಟದ ಪಾರದರ್ಶಕ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ಆಗ್ರಹಿಸಿದ್ದರಲ್ಲದೆ, ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ನಿಯಮ ಉಲ್ಲಂಘನೆ ನಡೆದಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿಯವರೇ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಈ ನೇಮಕಾತಿ ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಅಭ್ಯರ್ಥಿಗಳಾಗಿದ್ದರು ಎಂಬುದು ವಿವಾದಕ್ಕೆ ಕಾರಣವಾಗಿದೆ.
ಅಧ್ಯಕ್ಷರೇ ಆಯೋಗದ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ತಮ್ಮ ಕುಟುಂಬದ ಸದಸ್ಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಇತ್ತೀಚೆಗೆ ಪ್ರಕಟವಾದ ಆಯ್ಕೆ ಪ್ರಕ್ರಿಯೆಗಳಿಗೂ ಅವರೇ ಸಹಿ ಹಾಕಿರುವುದು ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ ಎಂದು ಸಚಿವ ಜೋಶಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ, ಮೀಸಲಾತಿ ಹಾಗೂ ಆದಾಯ ಮಾನದಂಡಗಳನ್ನು ಗಾಳಿಗೆ ತೂರಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದ್ದು, ಸುಳ್ಳು ಮಾಹಿತಿ ನೀಡಿ ಮೀಸಲಾತಿ ಸೌಲಭ್ಯ ಪಡೆಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದು ಅರ್ಹ ಹಾಗೂ ಪ್ರಾಮಾಣಿಕ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.
ಇನ್ನೂ ರಾಜ್ಯದ ಲಕ್ಷಾಂತರ ಯುವಕರ ಭವಿಷ್ಯವನ್ನು ನಿರ್ಧರಿಸುವ ಕೆಪಿಎಸ್‌ಸಿ ಸಂಸ್ಥೆಯ ಪಾವಿತ್ರ್ಯತೆ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ಆದ್ದರಿಂದ ತಕ್ಷಣವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಹಾಗೂ ರಾಜ್ಯಪಾಲರೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆರಂಭವಾಗಿದೆ.



