ಮದ್ದೂರು: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಮತದಾರರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆಂದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಕುಂಟನಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಬಿರುಸಿನ ಮತ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2 ಬಾರಿ ಮುಖ್ಯಮಂತ್ರಿಯಾಗಿ ತನ್ನದೆಯಾದ ಹಲವಾರು ಕೊಡುಗೆಗಳನ್ನು ನೀಡಿರುವ ಕುಮಾರಸ್ವಾಮಿ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಮತದಾರರು ಆಶೀರ್ವಾದ ಮಾಡಲಿದ್ದಾರೆಂದು ಭರವಸೆ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಹಿಳೆಯರ ಹಾಗೂ ಸಾಮಾನ್ಯವರ್ಗದ ಜನರು ಬೇಡಿಕೆಯಂತೆ ಲಾಟರಿ, ಸಾರಾಯಿ ನಿಷೇಧ ಮಾಡುವ ಮೂಲಕ ರಾಜ್ಯದ ಜನರಿಗೆ ಶಾಶ್ವತ ನೆಮ್ಮದಿ ದೊರಕಿಸಿಕೊಟ್ಟಿದ್ದಾರೆ ಹಾಗೂ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟ ಹೃದಯವಂತ ಎಂದು ಮೆಚ್ಚುಗೆ ವ್ಯಕ್ತಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ವಿಶ್ವವೇ ಮೆಚ್ಚಿಕೊಂಡು ವಿಶ್ವಗುರು, ವಿಶ್ವನಾಯಕ ಎಂದು ಮೋದಿ ಅವರನ್ನು ಕೊಂಡಾಡುತ್ತಿದೆ. ಮೋದಿ ಅವರು ಉತ್ತಮ ಹಾಗೂ ಪ್ರಾಮಾಣಿಕವಾಗಿ ಆಡಳಿತ ನೀಡುವ ಮೂಲಕ ದೇಶದ ಜನರ ಮನ ಗೆದ್ದಿದ್ದಾರೆ. ಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಮಾತನಾಡಿ, ಮೋದಿ ಅವರ ಆಡಳಿತದಲ್ಲಿ ದೇಶ ಪ್ರಪಂಚದ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಹಲವಾರು ಮಹತ್ತರವಾದ ಯೋಜನೆಗಳನ್ನು ಜಾರಿಗೆ ತಂದು ಪ್ರತಿಯೊಬ್ಬರಿಗೂ ಮೋದಿ ಅವರು ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಿದರುಕೋಟೆ ಕುಶ, ಯುವ ಘಟಕದ ಉಪಾಧ್ಯಕ್ಷ ಪ್ರದೀಪ್, ಮುಖಂಡರಾದ ಕೋಣಸಾಲೆ ಮಧು, ಕೌಡ್ಲೆ ರಾಮಣ್ಣ, ನಂಜುಂಡಯ್ಯ, ನಂಜೇಗೌಡ, ಪುಟ್ಟಸ್ವಾಮಿ ಇದ್ದರು.