Friday, April 11, 2025
Google search engine

Homeರಾಜ್ಯಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಪ್ರಶ್ನೋತ್ತರ ವೇಳೆ ಸುಳ್ಯ ಕ್ಷೇತ್ರದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಉಪಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವಧನ ಹೆಚ್ಚಳವನ್ನೇ ಮಾಡಿಲ್ಲ. ಈಗ ಗೌರವಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವರು ತಿಳಿಸಿದರು.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರ ಪರಿಗಣನೆ: ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರನ್ನು ಪರಿಗಣಿಸಲಾಗಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ ಶಾಸಕಿ ನಯನ ಮೋಟಮ್ಮ ರವರ ಪ್ರಶ್ನೆಗೆ ಉತ್ತರಿಸಿದರು.

ಕರ್ನಾಟಕದ ಗ್ಯಾರಂಟಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‌ಝೆಂಡರ್ಸ್ ಸರ್ಟಿಫಿಕೇಷನ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ಹೊಂದಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ಎರಡು ಸಾವಿರ ರೂ.ಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದರು.

ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ವಿವರಿಸಿದರು.

RELATED ARTICLES
- Advertisment -
Google search engine

Most Popular