ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿ ನೀಡಿರುವ ದೂರಿನನ್ವಯ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಸದಸ್ಯೆ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.
ಈ ಕುರಿತು ದೂರುದಾರ ನಾರಾಯಣಸ್ವಾಮಿ ಮಾತನಾಡಿ, ಬಿಜೆಪಿ ಶಾಸಕ ಮುನಿರತ್ನ ನಮ್ಮ ಮೇಲೆ ದೌರ್ಜನ್ಯವೆಸಗಿದ್ದಾರೆ ಈ ಬಗ್ಗೆ ಸಿಐಡಿ, ಎಸ್‌ಐಟಿ ತಂಡಕ್ಕೆ ದೂರು ನೀಡಲು ಹೋದಾಗ ಸ್ಥಳೀಯ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದರು. ಅದರಂತೆ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದೇನೆ ಎಂದರು.
ಚಾರ್ಜ್‌ಶೀಟ್ ಸಲ್ಲಿಕೆ: ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ೫೯೦ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಸೆ.೧೪ರಂದು ಮುನಿರತ್ನ ಬಂಧನ ಆಗಿ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಬಂದಿದ್ದರು. ಇದೀಗ ೫೩ ಸಾಕ್ಷಿಗಳು ಹಾಗೂ ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆ ಕೂಡ ಉಲ್ಲೇಖಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.