ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳು ಮುಂದುವರಿದಿದ್ದು, ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ.
ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (೨೪) ಸಾವಿಗೀಡಾಗಿದ್ದಾರೆ. ಜನವರಿ ೨ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಭಾನುವಾರ ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ಸರಸ್ವತಿ ಸಾವಿನಿಂದಾಗಿ ಕುಟುಂಬ ಸದಸ್ಯರು ಆತಂಕಕ್ಕೆ ಒಳಗಾಗಿದ್ದಾರೆ. “ಸರಸ್ವತಿಗೆ ಹೆರಿಗೆ ಬಳಿಕ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ’ ಎಂದು ರಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ. ಭಾಸ್ಕರ್ ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ ೧೨ಕ್ಕೆ ಏರಿಕೆಯಾಗಿದೆ.
ರಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ.