ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವಂತಹ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಬೆಳಗಿಸುತ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲೆ ಮಾದರಿಯಾಗಿದೆ ಎಂದು ಶ್ರೀ ಶ್ರೀ ಶಂಕರ್ ಮಹಾದೇವನ್ ಸ್ವಾಮೀಜಿಯವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರದಲ್ಲಿದ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ಪ್ರವಚನವನ್ನು ನೀಡಿ ಅವರು ಮಾತನಾಡಿದರು.
ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ, ಗಣಕಯಂತ್ರ ಪ್ರಯೋಗಾಲಯ, ಇ ಗ್ರಂಥಾಲಯ ಹೀಗೆ ಅನೇಕ ಉತ್ತಮ ಸೌಲಭ್ಯಗಳನ್ನು ಒದಗಿಸಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಯಾವುದೇ ರೀತಿಯ ಕೊರತೆಗಳು ಆಗದ ಹಾಗೆ ಬಹಳ ಕಾಳಜಿವಹಿಸಿ ಮಾರ್ಗದರ್ಶನ ನೀಡುತ್ತಿರುವ ಸ್ಥಳೀಯ ಶಾಸಕರಾದ ಕೆ. ಗೋಪಾಲಯ್ಯ ಅವರಿಗೆ ಅಭಿನಂದನೆಗಳು ಎಂದು ಹೇಳಿದರು.
ಗುಣಮಟ್ಟ ಶಿಕ್ಷಣ ನೀಡಿ ಮಕ್ಕಳ ಭವಿಷ್ಯವನ್ನು ಉಜ್ವಲ ಗೊಳಿಸುವಂತಹ ಉತ್ತಮವಾದ ಕಾರ್ಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಾಲೆಯಲ್ಲಿನ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿ ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ತೆಗೆದುಕೊಂಡು ಹೋಗಬೇಕು ಎಂದು ಶಾಲೆಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಗೋಪಾಲಯ್ಯ, ಓಬಿಸಿ ರಾಜ್ಯಾಧ್ಯಕ್ಷ ನೆಲನರೇಂದ್ರಬಾಬು, ವೆಂಕಟೇಶ್, ವೆಂಕಟೇಶ್ ಮೂರ್ತಿ, ಶ್ರೀನಿವಾಸ್, ವಾರ್ಡ್ ಅಧ್ಯಕ್ಷ ತ್ಯಾಗರಾಜ್, ವಾರ್ಡ್ ಮಹಿಳಾ ಅಧ್ಯಕ್ಷೆ ರತ್ನಮ್ಮ, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಪ್ರಕಾಶ್, ಮಹಾದೇವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.