Monday, April 21, 2025
Google search engine

Homeರಾಜ್ಯಸುದ್ದಿಜಾಲಪಂಚ ಗ್ಯಾರಂಟಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಎನ್. ಚೆಲುವರಾಯಸ್ವಾಮಿ

ಪಂಚ ಗ್ಯಾರಂಟಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಎನ್. ಚೆಲುವರಾಯಸ್ವಾಮಿ

ಮಂಡ್ಯ: ಜನ ಸಾಮನ್ಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಪಂಚ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿಯವರು ತಿಳಿಸಿದರು. ಅವರು ಇಂದು ಮೈಷುಗರ್ ಫ್ಯಾಕ್ಟರಿ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾರಂಭ ಮತ್ತು ಡಿ. ಸಿ. ಸಿ. ಬ್ಯಾಂಕ್ ನ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ವಿತರಣೆ ಹಾಗೂ ಮಾಹಿತಿ ನೀಡುವ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ೧೧೨ ಕೋಟಿ ರೂಗಳನ್ನ ೫ ಲಕ್ಷದೊಳಗಿನ ಸಾಲವನ್ನು ಬಡ್ಡಿ ರಹಿತವಾಗಿ ನೀಡಲಾಗುತ್ತಿದೆ. ೫ ಲಕ್ಷಕ್ಕಿಂತ ಹೆಚ್ಚಿನ ಸಾಲಕ್ಕೆ ಮಾತ್ರ ಬಡ್ಡಿಯನ್ನು ವಿಧಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಈ ವಷ ೨೦ ಲಕ್ಷ ರೈತರಿಗೆ ೧೬,೦೦೦ಕೋಟಿ ರೂಗಳನ್ನು ಬಡ್ಡಿ ರಹಿತ( ಶೂನ್ಯ ಬಡ್ಡಿ)ಸಾಲ ನೀಡಲಾಗಿದೆ. ಅದರ ಬಡ್ಡಿಯನ್ನು ಸರ್ಕಾರ ಡಿ. ಸಿ. ಸಿ ಬ್ಯಾಂಕಿಗೆ ಪಾವತಿಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆಯ ಸೌಲಭ್ಯವನ್ನು ಇದುವರೆಗೆ ೩.೫೮ ಕೋಟಿ ಜಿಲ್ಲೆಯ ಮಹಿಳೆಯರು ಸದುಪಯೋಗವನ್ನು ಪಡೆದುಕೊಂಡಿದ್ದಾರೆ.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ೪, ೩೬,೫೧೦ ಜನರು ಫಲಾನುಭವಿಯಾಗಿದ್ದಾರೆ. ಈ ಯೋಜನೆಗೆ ರಾಜ್ಯ ಸರ್ಕಾರ ೧೩೭ ಕೋಟಿ ರೂ ವೆಚ್ಚವನ್ನು ಭರಿಸಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ತಲಾ ೨೦೦೦ ರೂ ಗಳಂತೆ,೪೩೫೮೨೦ ಮಹಿಳೆಯರಿಗೆ ನೀಡಿ ೮೯.೧೭ ಕೋಟಿ ರೂ ವೆಚ್ಚವನ್ನು ಭರಿಸಿದೆ ಎಂದರು. ಗೃಹ ಜ್ಯೋತಿ ಯೋಜನೆಯಲ್ಲಿ ಜಿಲ್ಲೆಯಲ್ಲಿರುವ ೪ ಲಕ್ಷದ ೬೪ ಸಾವಿರ ಕುಟುಂಬಗಳು ಫಲಾನುಭವಿಯಾಗಿದ್ದು, ೭೬ ಸಾವಿರ ಕೋಟಿ ರೂಗಳನ್ನು ಸರ್ಕಾರ ಪಾವತಿಸಿದೆ ಎಂದರು. ಜಿಲ್ಲೆಯಲ್ಲಿ ೨೬೦೦ ಯುವಕರು ಯುವನಿಧಿ ಯೋಜನೆಯಲ್ಲಿ ನೋಂದಣಿಯಾಗಿದ್ದು, ಪದವೀಧರರಿಗೆ ೩೦೦೦ ಹಾಗೂ ಡಿಪ್ಲೋಮೋ ಮುಗಿಸಿದವರಿಗೆ ನಿರುದ್ಯೋಗ ಭತ್ಯೆಯಾಗಿ ಗರಿಷ್ಟ ೨ ವಷಗಳವರೆಗೆ ೧೫೦೦ ರೂಗಳನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುವುದು ಎಂದರು.
ಇದಲ್ಲದೆ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಇನ್ನಿತರ ಸೌಲಭ್ಯವನ್ನು ನೀಡಲಾಗುತ್ತಿದೆ. ಮುಂದಿನ ೨ ಅಥವಾ ೩ ವಷದೊಳಗೆ ಜಿಲ್ಲೆಯ ಎಲ್ಲಾ ರಸ್ತೆಗಳನ್ನು ಆಧುನೀಕರಣಗೊಳಿಸಲಾಗುವುದು. ಜಿಲ್ಲೆಯಲ್ಲಿ ಇನ್ನು ಮುಂದೆ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿದೆ ಎಂದರು.

ಸರ್ಕಾರದಿಂದ ಬೆಳೆ ಪರಿಹಾರವಾಗಿ ಪ್ರತಿ ಹೆಕ್ಟೇರ್ ಗೆ ೨ ಸಾವಿರದಂತೆ ಒಟ್ಟು ೫೦ ಲಕ್ಷ ಹೆಕ್ಟರಿಗೆ ನೇರವಾಗಿ ಫಲಾನುಭವಿಯ ಖಾತೆಗೆ ಹಣ ತಲುಪಿದೆ ಎಂದರು. ಸರ್ಕಾರ ಹಾಗೂ ಸಾರ್ವಜನಿಕರ ನಡುವೆ ಇರುವ ಸಂಬಂಧವನ್ನು ೫ ಗ್ಯಾರಂಟಿ ಯೋಜನೆಯು ಗಟ್ಟಿ ಮಾಡಿದೆ. ಸಾರ್ವಜನಿಕರಿಗೆ ಪಾರದರ್ಶಕವಾಗಿ ೫ ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಿ ಜನಸಮಾನ್ಯರ ಕಷಗಳಿಗೆ ಸ್ಪಂದಿಸಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು. ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಾಮೇಶ ಬಂಡಿಸಿದ್ದೇಗೌಡ ಅವರು ಮಾತನಾಡಿ ಸರ್ಕಾರ ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಮಾಡಿದೆ. ಮುಂದಿನ ದಿನಗಳಲ್ಲಿ ಹೊಸ ಸಕ್ಕರೆ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ರೈತರ ಬದುಕು ಸುಧಾರಿಸಲು ವಿ.ಸಿ.ನಾಲೆ ಹಾಗೂ ಅಣೆಕಟ್ಟು ನಾಲೆಗಳನ್ನು ಆಧುನೀಕರಣ ಗೊಳಿಸಿ ಕಟ್ಟಕಡೆಯ ಭಾಗಕ್ಕೆ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಸದಾ ರೈತರ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತದೆ ಎಂದರು.
ಶಾಸಕ ದರ್ಶನ ಪುಟ್ಟಣ್ಣಯ್ಯ ಅವರು ಮಾತನಾಡಿ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಸ್ಥಳೀಯವಾಗಿ ಜನರ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ. ಡಿ.ಸಿ.ಸಿ ಬ್ಯಾಂಕ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ೧೬ ಸಾವಿರ ಕೋಟಿ ಸಾಲ ನೀಡಲಾಗಿದೆ. ಇದರ ಬಡ್ಡಿಯನ್ನು ಸರ್ಕಾರ ಬರಿಸುತ್ತಿದೆ. ಪರಿಸರದಲ್ಲಿ ಆಗುತ್ತಿರುವ ವೈಪರೀತ್ಯದಿಂದ ಕೃಷಿ ಪದ್ಧತಿಯಲ್ಲಿ ಹೊಸ ಬದಲಾವಣೆ ಮಾಡಿಕೊಳ್ಳಬೇಕಿದೆ. ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿಯನ್ನು ಇಲಾಖೆಗಳು ನೀಡಬೇಕು ಎಂದರು.

ಶಾಸಕ ಪಿ.ರವಿಕುಮಾರ್ ಅವರು ಮಾತನಾಡಿ ಮಂಡ್ಯ ತಾಲ್ಲೂಕಿನ ಬಸರಾಳಿನಲ್ಲಿರುವ ೧೦೦ ಎಕರೆ ಸ್ಥಳದಲ್ಲಿ ಜವಳಿ ಪಾರ್ಕ್ ಹಾಗೂ ಸಾಫ್ಟವೇರ್ ಕಂಪನಿಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದರಿಂದ ಜಿಲ್ಲೆಯ ನಿರುದ್ಯೋಗಿಗಳಿಗೆ ಕೆಲಸ ಸಿಗಲಿದೆ ಎಂದರು. ಮಂಡ್ಯ ತಾಲ್ಲೂಕು ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗೆ ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮನೆ- ಮನೆಗೆ ಕುಡಿಯುವ ನೀರು ಒದಗಿಸುವ ಕೆಲಸವನ್ನು ಪ್ರಾರಂಭಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ,ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶೇಖ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಡಿ. ಸಿ. ಸಿ. ಬ್ಯಾಂಕ್ ಕಾರ್ಯ ನಿರ್ವಹಣಾ ಅಧಿಕಾರಿ ಸಿ. ವನಜಾಕ್ಷಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular