ಚಾಮರಾಜನಗರ: ಬೀದಿ ನಾಟಕಗಳ ಮೂಲಕ ಜನರಿಗೆ ಬಾಲಕಾರ್ಮಿಕ ಪದ್ದತಿ ನಿಷೇಧ ಹಾಗೂ ಹಕ್ಕುಗಳ ಬಗ್ಗೆ ಕಾನೂನು ಅರಿವು ಮೂಡಿಸುತ್ತಿರುವುದು ಪರಿಣಾಮಕಾರಿಯಾದ ಮಾರ್ಗವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ರಂಗತರಂಗ ಟ್ರಸ್ಟ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು, ಬಾಲ್ಯಾವ್ಯಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರವು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜನರು ಬಾಲಕಾರ್ಮಿಕ ಪದ್ಧತಿ ನಿಷೇಧ ಹಾಗೂ ಮಕ್ಕಳ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಸರಿಯಾಗಿ ಅರಿತುಕೊಂಡಾಗ ಮಾತ್ರ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯ. ಬೀದಿ ನಾಟಕವು ಜನರಿಗೆ ಆಕರ್ಷಣಿಯದ ಜೊತೆಗೆ ಅರಿವು ಮೂಡಿಸುವ ಉತ್ತಮ ದಾರಿಯಾಗಿದೆ ಎಂದು ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಶಿಕ್ಷಣವು ಪ್ರತಿಯೊಬ್ಬರ ಹಕ್ಕು. ಶಾಲೆಯಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಪೋಷಕರು ಬಾಲಕಾರ್ಮಿಕ ಪದ್ದತಿಯಿಂದ ಉಂಟಾಗುವ ಗಂಭೀರ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರು ಮಕ್ಕಳ ಹಕ್ಕು ಮತ್ತು ಕಾನೂನುಗಳನ್ನು ಗೌರವಿಸಬೇಕು. ಕೈಗಾರಿಕೆ ಹಾಗೂ ಯಾವುದೇ ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ದುಡಿಮೆಗೆ ದೂಡುವಂತಿಲ್ಲ. ಮಕ್ಕಳನ್ನ ಕೆಲಸಕ್ಕೆ ಕಳುಹಿಸುವುದು ಶಿಕ್ಷರ್ಹ ಅಪರಾಧ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ, ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಎಸ್. ಹೊನ್ನಸ್ವಾಮಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಕಾರ್ಯದರ್ಶಿ ವಿರೂಪಾಕ್ಷ, ಸರ್ಕಾರಿ ಅಭಿಯೋಜಕ ಯೋಗೇಶ್, ರಾಜಶೇಖರ್ ಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತಾ ಇತರರು ಉಪಸ್ಥಿತರಿದ್ದರು.