ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮಾಡುವಂತಿಲ್ಲ. ಬಳಕೆ ಕಂಡು ಬಂದರೆ ದಂಡ ವಿಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಟೀ ಅಂಗಡಿಗಳು ಹಾಗೂ ಕಾಫಿ ಶಾಪ್‌ಗಳಲ್ಲಿ ಸಿಗರೇಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಅಂಗಡಿ ಮಾಲೀಕರಿಗೆ ಈ ಕುರಿತು ಅರಿವು ಮೂಡಿಸಬೇಕು. ಟೀ ಕುಡಿಯಲು ಬರುವ ಇತರ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಕಾನೂನು ಪಾಲನೆ ಮಾಡದೇ ಇದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶಾಲಾ ಕಾಲೇಜುಗಳ ಕಾಂಪೌಂಡ್‌ನ ೧೦೦ ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಮಾಡುವಂತಿಲ್ಲ. ಕೆಲವೆಡೆ ಶಾಲಾ ಕಾಲೇಜುಗಳು ಹತ್ತಿರದಲ್ಲಿಯೇ ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ. ಅಂತಹ ಪ್ರಕರಣ ಕಂಡು ಬಂದರೆ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲೆಗಳು ಹಾಗೂ ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ತಂಬಾಕು ಮುಕ್ತ ವಲಯ ನಾಮಫಲಕಗಳನ್ನು ಅಳವಡಿಸಿ ಹಾಗೂ ಗೋಡೆ ಬರಹಗಳನ್ನು ಬರೆಯಬೇಕು. ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯಗಳಾಗಿ ಮಾಡಬೇಕು. ಶಾಲಾ ಕಾಲೇಜು ಹಂತದಲ್ಲಿಯೇ ಮಕ್ಕಳು ತಂಬಾಕು ಸೇವನೆ ಮಾಡದಂತೆ ತಡೆದರೆ ಮುಂದೆ ಅವರು ತಂಬಾಕು ಉತ್ಪನ್ನಗಳ ಸೇವನೆಗೆ ಒಳಗಾಗುವುದನ್ನು ತಡೆಯಬಹುದು ಎಂದರು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಅಶಾದ್ ಉರ್ ರೆಹ್ಮಾನ್ ಶರೀಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಹದೇವ್ ಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.