ಚಿತ್ರದುರ್ಗ: ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆದು ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಹಾಗೂ ಸಮಾಜಕ್ಕೆ ಒಳ್ಳೆಯ ಪ್ರಜೆಯಾಗಿ ಬದುಕಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲ ಅವರು ವಿದ್ಯಾರ್ಥಿಗಳಿಗೆ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ “ಪೋಕ್ಸೋ ಕಾಯ್ದೆ ಕುರಿತು” ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಂವಿಧಾನದಲ್ಲಿ ಅಳವಡಿಕೆಯಾಗಿರುವ ಅಂಶಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಬಾಲ್ಯವಿವಾಹದ ದುಷ್ಪರಿಣಾಮಗಳು ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿತುಕೊಂಡು, ಇದನ್ನು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಮಾತನಾಡಿ, ಪೋಕ್ಸೋ ಪ್ರಕರಣಗಳಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿ ಇದ್ದರೆ ಚಿತ್ರದುರ್ಗ ಎರಡನೇ ಸ್ಥಾನದಲ್ಲಿ ಇದೆ. 18 ವರ್ಷದ ಒಳಗಿನ ಮಕ್ಕಳು ದೌರ್ಜನ್ಯಗಳಿಗೆ ಬಲಿಯಾಗದೇ, ಗುಣಮಟ್ಟದ ಶಿಕ್ಷಣ ಪಡೆದು ಉತ್ತಮವಾದ ಜೀವನವನ್ನು ನಿರ್ಮಾಣ ಮಾಡಿಕೊಳ್ಳಬೇಕು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಶಾಲೆ ಹಾಗೂ ಕಾಲೇಜು ಬಿಟ್ಟಿರುವಂತಹ ನೊಂದ ಬಾಲಕಿಯರನ್ನು ಪುನಃ ಶಾಲಾ ಕಾಲೇಜುಗಳಿಗೆ ಕರೆತರುವಲ್ಲಿ ಸಹಕಾರ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ನಾಳಿನ ಜಗತ್ತಿನ ಶ್ರೇಷ್ಠ ಮಕ್ಕಳು ನೀವಾಗಬೇಕು, ಭವ್ಯ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ ದೊಡ್ಡ ವ್ಯಕ್ತಿಗಳಾಗಬೇಕೆಂಬ ನಿರ್ಧಾರ ನಿಮ್ಮದಾಗಿರಲಿ, ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಬದುಕು ಅವನತಿಯಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿ. ಜಗದೀಶ ಹೆಬ್ಬಳ್ಳಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್, ಸಮಾಜ ಕಲ್ಯಾಣ ಇಲಾಖೆ ನೋಡಲ್ ಅಧಿಕಾರಿ ಚಂದ್ರಕಲಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ. ಕೃಷ್ಣ ಸೇರಿದಂತೆ ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಇದ್ದರು.
