Friday, April 11, 2025
Google search engine

Homeಅಪರಾಧಕಾನೂನುಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ: ಸತೀಶ್​​ ಸೈಲ್​ಗೆ 7 ವರ್ಷ ಜೈಲು

ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ: ಸತೀಶ್​​ ಸೈಲ್​ಗೆ 7 ವರ್ಷ ಜೈಲು

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24 ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿತ್ತು.

44 ಕೋಟಿ ರೂ.ಗೂ ಹೆಚ್ಚು ದಂಡ

ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ ವಿಧಿಸಿದ ದಂಡದ ಮೊತ್ತ 44 ಕೋಟಿ ರೂಪಾಯಿ ದಾಟಿದೆ. ಈಗ ಕಳೆದಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆ ಅನುಭವಿಸಬೇಕಿದೆ. ಸತೀಶ್ ಸೈಲ್‌ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್‌, ಮಲ್ಲಿಕಾರ್ಜುನ ಶಿಪ್ಪಿಂಗ್‌ಗೂ ಜೈಲು ಶಿಕ್ಷೆ ವಿಧಿಸಲಾಗಿದೆ.

ಶಾಸಕ ಸ್ಥಾನ ಅನರ್ಹ

ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್​ಗೆ 7 ವರ್ಷದಷ್ಟು ಜೈಲು ಶಿಕ್ಷೆ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.

ಏನಿದು ಪ್ರಕರಣ?

ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ 1 ಭಾರಿ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20 ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.

ಈ ಅದಿರನ್ನು ಕಾಯ್ದುಕೊಳ್ಳುವಂತೆ ಬೇಲೆಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆಯು ಸೂಚನೆಯನ್ನು ನೀಡಿತ್ತು. ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಮರು ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಅದಿರು ನಾಪತ್ತೆ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆಯು ದೂರು ನೀಡಿತ್ತು.

ಈ ಅಕ್ರಮವೆಸಗಿದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತಾಯ ಮಾಡಿದ್ದರು. ಆಗ ಹಗರಣ ಬೆಳಕಿಗೆ ಬಂದಿತ್ತು. 2010ರ ಜೂ.23ರಂದು ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು.

ಸುಪ್ರೀಂಕೋರ್ಟ್ 2009 ರಿಂದ ಮೇ 2010ರ ನಡುವೆ ರಾಜ್ಯದಲ್ಲಿನ ನಡೆದ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಅದಿರು ಸಾಗಣೆ ಕುರಿತು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರಂತೆ ಸಿಬಿಐ 2013ರ ಸೆ.13 ರಂದು ಕೇಸ್‌ ದಾಖಲಿಸಿ ತನಿಖೆಕೈಗೊಂಡಿತ್ತು.

ಸತೀಶ್ ಮಾಲಿಕತ್ವದ ಕಂಪನಿ ಸುಮಾರು 7.23 ಲಕ್ಷ ಟನ್‌ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ತನಿಖೆಯಲ್ಲಿ ಕಂಡುಬಂತು. ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ರವಾನೆ ಮಾಡಲಾಗಿತ್ತು ಎಂಬುದನ್ನು ಕೇಂದ್ರೀಯ ಸಮಿತಿ ಪ್ರಾಧಿಕಾರ (ಸಿಇಸಿ) ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.

ಆರೋಪಿಗಳ ಜತೆ ಸಂಚು ರೂಪಿಸಿ ಸತೀಶ್ ಸೈಲ್ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದರು. ಹೀಗೆ ರಫ್ತಾಗಿರುವ ಅದಿರಿನಲ್ಲಿ 7.23 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ.ಲಿ. ಕಂಪನಿಯೇ ರಫ್ತು ಮಾಡಿತ್ತು ಎಂದು ಸಿಬಿಐ ಆರೋಪಿಸಿತ್ತು. ಸಿಬಿಐ ಪರ ಎಸ್​ಪಿಪಿ ಕೆ.ಎಸ್.ಹೇಮಾ, ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.

RELATED ARTICLES
- Advertisment -
Google search engine

Most Popular