Tuesday, April 22, 2025
Google search engine

HomeUncategorizedಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.9) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಒಂದು ವೇಳೆ ಸಮಸ್ಯೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು.

ಈಗಲೇ ಸಮಯಾವಕಾಶ ಇರುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸೂಕ್ತ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಅರ್ಹ ಪ್ರತಿಯೊಬ್ಬರಿಗೂ ನರೇಗಾ ಯೋಜನೆಯಡಿ ಕೆಲಸ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಸಕಾಲದಲ್ಲಿ ಕೂಲಿ ಜಮೆಯಾಗಬೇಕು ಎಂದು ತಿಳಿಸಿದರು.

ಮಳೆ ಕೊರತೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅದನ್ನು ನಿವಾರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಗಾವಿ ನಗರದಲ್ಲಿಯ ನಡೆಯುತ್ತಿರುವ ನಿರಂತರ ನೀರು(24×7) ಪೂರೈಕೆ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ನಿರ್ದೇಶನ ನೀಡಿದರು. ಈ ಯೋಜನೆ ಬೇಗ ಪೂರ್ಣಗೊಂಡರೆ ನಾಗರಿಕರಿಗೆ ಅನುಕೂಲವಾಗಲಿದೆ. ಆದ್ದರಿಂದ ಕಾಮಗಾರಿ ಚುರುಕುಗೊಳಿಸಬೇಕು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಅಡ್ಡಿಯಾಗಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೇ ನಿವಾರಿಸಬೇಕು. ಜಿಲ್ಲೆಯಲ್ಲಿ ಬಾಕಿ ಇರುವ 7 ಸಾವಿರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ್ ಹೆಗ್ಗನಾಯಿಕ, ಉಪ ವಿಭಾಗಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular