ಚಾಮರಾಜನಗರ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಈ ಒಂದು ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು ವರದಿ ಬಂದ ಬಳಿಕ ಇದರಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ತಿಳಿಸಿದರು.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ನಿನ್ನೆ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲೂ ಚರ್ಚೆ ಮಾಡಿದ್ದೇವೆ. ಇದಕ್ಕೆ ಕಮಿಟಿಯನ್ನು ರಚಿಸಿದ್ದೇವೆ. ಅವರು ವರದಿ ಕೊಡುತ್ತಾರೆ. ವರದಿಯ ಬಳಿಕ ತಪ್ಪಿತಸ್ಥ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಡ್ರಗ್ ಕಂಟ್ರೋಲರ್ ನನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಯಾರು ಔಷಧಿಯನ್ನು ಸಪ್ಲೈ ಮಾಡಿದ್ದಾರಲ್ಲ ಅವರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗಿದೆ ಎಂದು ಚಾಮರಾಜನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬಾಣಂತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಇಂದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಮೇಲೆ ದಾಳಿ ಮಾಡಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳ ಮೂರು ತಂಡ ಬಿಮ್ಸ್ ಆಸ್ಪತ್ರೆಯ ಮೇಲೆ ದಾಳಿ ಮಾಡಿ, ಆಸ್ಪತ್ರೆಯಲ್ಲಿರುವ ಸಿಬ್ಬಂದಿಗಳ ಬಳಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.