ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಬೆಂಗಳೂರಿನ ಯಶವಂತಪುರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿತು.
ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ. ಹೀಗಾಗಿ, ಅರ್ಜಿಯು ಅಸ್ತಿತ್ವ ಕಳೆದುಕೊಂಡಿದ್ದು, ಅವುಗಳನ್ನು ವಜಾ ಮಾಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು. ಸಿಒಡಿ-ಎಸ್ಟಿಯ ಪರವಾಗಿ ಹಾಜರಾಗಿದ್ದ ಸರ್ಕಾರಿ ವಕೀಲರು, ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಪ್ರಕರಣದ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಕೊಂಡಿದೆ ಎಂದರು. ಇದನ್ನು ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.