ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಮೈತ್ರಿ ಮೂಲಕ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಈ ಕುರಿತು ಮಾತುಕತೆ ನಡೆದಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮತ್ತು ನಮ್ಮ ವರಿಷ್ಠರಾದ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಮೈತ್ರಿ ಮಾತುಕತೆ ನಡೆಸಿದ್ದಾರೆ. ಉಭಯ ಪಕ್ಷಗಳ ನಾಯಕರು ಕೂಡಾ ಒಪ್ಪಿಕೊಂಡಿದ್ದಾರೆ. ಜೆಡಿಎಸ್‌ಗೆ ನಾಲ್ಕು ಸ್ಥಾನ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್‌ಗೆ ೪ ಸ್ಥಾನ ಬಿಟ್ಟುಕೊಟ್ಟು ಇನ್ನುಳಿದ ೨೪ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದರು.
ಮೈತ್ರಿಯನ್ನು ನಾನು ಸ್ವಾಗತಿಸುತ್ತೇನೆ. ಈ ಮೂಲಕ ನಾವು ಹೆಚ್ಚು ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ. ಮೈತ್ರಿಕೂಟಕ್ಕೆ ೨೫-೨೬ ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದರು.