ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟೀಕಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಪರಿಶಿಷ್ಟ ಜಾತಿಗಳ ಗಣತಿ ವರದಿ ಸಲ್ಲಿಸಿದ ತಕ್ಷಣವೇ ಒಳಮೀಸಲಾತಿ ಕಲ್ಪಿಸುತ್ತೇವೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರೂ ಉಪಸ್ಥಿತರಿದ್ದರು.
ಈ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುತ್ತಿದ್ದಾರೆ. 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಆದರೆ ಸಮುದಾಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದರು. ಒಳಮೀಸಲಾತಿಯನ್ನು ಶೇ 15 ಅಥವಾ ಶೇ 17ರಲ್ಲಿ ಎಷ್ಟು ಪ್ರಮಾಣ ನಿಗದಿ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿ ಆ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ ಎಂದು ಮುನಿಯಪ್ಪ ಹೇಳಿದರು.
ಕೇಂದ್ರದ ಮಾಜಿ ಸಚಿವ ನಾರಾಯಣಸ್ವಾಮಿ ಅವರು ಸಚಿವರಾಗಿದ್ದಾಗ ರಾಜ್ಯಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಪ್ರಸ್ತಾಪ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದನ್ನು ಪ್ರಸ್ತಾಪಿಸಿ ತಿರುಗೇಟು ನೀಡಿದರು.