ಮಂಗಳೂರು:ರಾಜ್ಯದಲ್ಲಿ ಬಿಜೆಪಿಯು ನಿರ್ನಾಮವಾಗುವ ಹಾದಿಯಲ್ಲಿದೆ. ಇದೇ ಕಾರಣಕ್ಕೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆರಿಸಲಾಗದ ಸ್ಥಿತಿಗೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ವ್ಯಂಗ್ಯವಾಡಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ತಮ್ಮ ಸೋಲಿಗೆ ಬಿಜೆಪಿಯವರೇ ಕಾರಣ ಎನ್ನುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರೂ ಟೀಕಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡು ಈಗ ಅವಧಿ ಮೀರಿದ ಔಷಧಿಯ ರೀತಿಯಲ್ಲಿ ನಳಿನ್ ಕುಮಾರ್ ಕಟೀಲು ಬಿಜೆಪಿಯಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿಗೆ ಶರಣಾಗಿದ್ದಾರೆ. ಈ ರೀತಿ ಬಿಜೆಪಿ ರಾಜ್ಯದಲ್ಲಿ ಅವನತಿಯ ಹಾದಿಯಲ್ಲಿದೆ ಎಂದು ಟೀಕಿಸಿದರು.
ಬಿಜೆಪಿ ಸರಕಾರದ ಅವಧಿಯ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಿಬಿಎಂಪಿ, ಜಿ.ಪಂ,ತಾ.ಪಂ ಚುನಾವಣೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದರು.