ಮಧ್ಯಪ್ರದೇಶ: ರಾಜ್ಯದ ವಿಧಾನಸಭಾ ಚುನಾವಣೆ ೨೦೨೩ರ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ ಆಡಳಿತ ಪಕ್ಷ ಬಿಜೆಪಿ ೧೨೦ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದೆ. ರಾಜ್ಯದ ೨೩೦ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ ೧೭ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ ೧೧೬. ಸದ್ಯದ ಮಾಹಿತಿಯಂತೆ ಬಿಜೆಪಿ ೧೨೦, ಕಾಂಗ್ರೆಸ್ ೧೦೦ ಮತ್ತು ಇತರರು ೩ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ೨೦೨೪ರ ಲೋಕಸಭಾ ಚುನಾವಣೆಗೆ ಮೊದಲು ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು. ಆದ್ದರಿಂದ ಚುನಾವಣೆಯ ಫಲಿತಾಂಶ ಕುತೂಹಲ ಮೂಡಿಸಿದೆ. ಭಾನುವಾರ ಬೆಳಗ್ಗೆ ಅಂಚೆ ಮತಗಳ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಮುಂದಿತ್ತು. ಆದರೆ ಇವಿಎಂ ಯಂತ್ರಗಳ ಮತ ಎಣಿಕೆ ಆರಂಭವಾದಾಗ ಬಿಜೆಪಿ ಸ್ಪಷ್ಟವಾ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ ೭೬.೨೨ರಷ್ಟು ಮತದಾನವಾಗಿತ್ತು.
ರಾಜ್ಯದಲ್ಲಿ ಸದ್ಯ ಅಧಿಕಾರದಲ್ಲಿರುವ ಪಕ್ಷ ಬಿಜೆಪಿ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ವಿರುದ್ಧ ಬುಧ್ನಿಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದ ಮಾಜಿ ಸಚಿವ ಮತ್ತು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಅರುಣ್ ಯಾದವ್ ಕಣಕ್ಕಿಳಿಸಿದೆ. ಆದರೆ ಚೌವ್ಹಾಣ್ ಮುನ್ನಡೆ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ೨೦೧೮ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ೧೧೪ ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್, ಎಸ್ಪಿ, ಬಿಎಸ್ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತು. ಕಮಲ್‌ನಾಥ್ ಮುಖ್ಯಮಂತ್ರಿಯಾದರು. ಆದರೆ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ ಸರ್ಕಾರ ಪತನಗೊಂಡಿತು. ರಾಜ್ಯದಲ್ಲಿ ಕಾಂಗ್ರೆಸ್ ಹಿನ್ನಡೆ ಕಾಣುವುದು ಮಾತ್ರವಲ್ಲ. ಚಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಮಲ್‌ನಾಥ್ ಸಹ ಹಿನ್ನಡೆ ಅನುಭವಿಸಿದ್ದಾರೆ. ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ಮುನ್ನಡೆ ಸಾಧಿಸಿದ್ದಾರೆ.