Friday, April 11, 2025
Google search engine

Homeರಾಜಕೀಯರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಬಿಜೆಪಿ ನಾಯಕರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಇದು ಕೊಲೆಗಡುಕ ಸರ್ಕಾರ ಎಂದು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ಬೆಳಗಾವಿಯ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮತ್ತು ಮೈಸೂರಿನ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣ ಸಾಕಷ್ಟು ಚರ್ಚೆಯಾಗುತ್ತಿದೆ. ಜೈನಮುನಿಯವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.

ನಂತರ ರಾಜಭವನಕ್ಕೆ ಪಾದಯಾತ್ರೆ ತೆರಳಿದ ಬಿಜೆಪಿ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಬದುಕಲು ದುಸ್ತರವಾಗುತ್ತದೆ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ನಿರ್ದೇಶನ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಪೊಲೀಸ್ ಅಧಿಕಾರಿಗಳು, ಕೆಳ ಹಂತದ ಪೊಲೀಸ್ ಅಧಿಕಾರಿಗಳ ಮೇಲೆ ಇಂದು ಒತ್ತಡವಿದೆ, ಇದು ಬದಲಾದ ಸರ್ಕಾರದ ಧೋರಣೆಯನ್ನು, ಕೆಲಸದ ವೈಖರಿಯನ್ನು ತೋರಿಸುತ್ತದೆ. ಇಂತಹ ಪ್ರಕರಣಗಳು ನಡೆದಾಗ ನ್ಯಾಯ ರೀತಿಯಲ್ಲಿ ತನಿಖೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಇದಕ್ಕಾಗಿ ಇದನ್ನು ಕೊಲೆಗಡುಕ, ಜಂಗಲ್ ರಾಜ್ಯ ಸರ್ಕಾರ ಎಂದು ಕರೆಯಲು ಇಚ್ಛಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಜೈನಮುನಿ ಹತ್ಯೆ ಕೇಸು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular