ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಬೆಳಗಾವಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ- ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಾಯತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ 23 ಬಿಜೆಪಿ ಶಾಸಕರು, 16 ಎಂಎಲ್ ಸಿಗಳು, ಕೆಲ ಜೆಡಿಎಸ್ ಸದಸ್ಯರು ಭಾಗಿಯಾಗಿದ್ದರು.
ಬಸವರಾಜ ಬೊಮಾಯಿ ಮಾತನಾಡಿ, ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾಂತಿಯುತ ಹೋರಾಟ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಲಾಠಿಚಾರ್ಜ್ ಮಾಡಲಾಗಿದೆ. ನಾವು ಯಾವುದೇ ರೀತಿಯ ಮುತ್ತಿಗೆ ಪ್ರಯತ್ನ ಮಾಡಿಲ್ಲ. ಮನವಿ ನೀಡಲು ಬರುತ್ತಿದ್ದೆವು. ಆದರೆ, ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕುವ ಯತ್ನ ಮಾಡಿದ್ದಾರೆ. ಪಂಚಮಸಾಲಿಗೆ ಮೀಸಲಾತಿ ನೀಡದಂತೆ ಹಿಂದುಳಿದ ವರ್ಗಗಳ ಒಕ್ಕೂಟ ಸಿಎಂಗೆ ಮನವಿ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಒಕ್ಕೂಟ ಅಲ್ಲ, ಸಿಎಂ ಕೃಪಾಪೋಷಿತ ನಾಟಕ ಮಂಡಳಿ ಎಂದು ಹೇಳಿದರು.
ಆರ್.ಅಶೋಕ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕುತಂತ್ರದಿಂದ ಪಂಚಮಸಾಲಿ ಸಮುದಾಯದವರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಒಂದು ವಾರದ ಹಿಂದೆಯೇ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ. ಏಕಾಏಕಿ ಪ್ರತಿಭಟನಾ ನಿರತರ ಮೇಲೆ ದೌರ್ಜನ್ಯವೆಸಗಲಾಗಿದೆ. ಕಾಂಗ್ರೆಸ್ ಸರ್ಕಾರ ಸಮುದಾಯದವರನ್ನು ಕ್ಷಮೆ ಕೋರಬೇಕು ಮತ್ತು ಲಾಠಿ ಚಾರ್ಜ್ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು.ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸೌಮ್ಯಯುತವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಪ್ರಚೋದನೆ ಮಾಡಿದವರು ಯಾರು, ಗಾಯಾಳುಗಳನ್ನು ಕಿಡ್ನಾಪ್ ಮಾಡಲಾಗಿದೆ. ಅವರನ್ನು ಎಲ್ಲಿಟ್ಟಿದ್ದೀರ ಹೇಳಿ. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಹೋರಾಟಗಾರರ ವಿರುದ್ಧ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಕೂಡಲೇ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.