ಮಂಗಳೂರು (ದಕ್ಷಿಣ ಕನ್ನಡ): ದೇಶದಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯರಿಗೆ ಯಾವುದೇ ತೊಂದರೆ ಆಗಿಲ್ಲ, ಆದರೆ ಬಿಜೆಪಿಗರು ತುರ್ತು ಪರಿಸ್ಥಿತಿ ವಿರುದ್ಧ ಕಾಂಗ್ರೆಸ್ ಮೇಲೆ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಹಾಗೂ ಸೈನ್ಯ ಸರಕಾರದ ವಿರುದ್ಧ ಬಂಡೇಳುವ ಸನ್ನಿವೇಶದಲ್ಲಿ ಇಂದಿರಾ ಗಾಂಧಿ ಪ್ರಜಾಪ್ರಭುತ್ವ ಉಳಿವಿಗಾಗಿ ತುರ್ತು ಪರಿಸ್ಥಿತಿ ಘೋಷಿಸಿದರು. ಆದರೆ ಅದೇ ವೇಳೆ ಭೂಮಸೂದೆಯನ್ನೂ ಜಾರಿಗೆ ತಂದಿದ್ದಾರೆ.
ಬ್ಯಾಂಕ್ ಹಾಗೂ ಬಸ್‌ಗಳ ರಾಷ್ಟ್ರೀಕರಣ ಮಾಡಿದ್ದಾರೆ. ಋಣ ಪರಿಹಾರ ಕಾಯ್ದೆಯಡಿ ಬಡವರಿಗೆ ಪರಿಹಾರ ಒದಗಿಸಿದ್ದಾರೆ. ಇಷ್ಟೆಲ್ಲ ಸುಧಾರಣೆಗಳು ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇದರ ಹೊರತು ತುರ್ತು ಪರಿಸ್ಥಿಯಿಂದ ದ.ಕ.ಜಿಲ್ಲೆಯಲ್ಲಿ ಯಾರಿಗೂ ಏನೂ ಆಗಿಲ್ಲ ಎಂದು ಸಮರ್ಥಿಸಿಕೊಂಡರು.