ಬೆಂಗಳೂರು : ನಾನು ಇವರ ಬಣ್ಣವನ್ನು ಬಯಲು ಮಾಡುವ ಕೆಲಸ ಮಾಡಿದ್ದೇನೆ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಬ್ಲ್ಯಾಕ್ ಮೇಲ್ ತಂತ್ರದಿಂದ ಆಗಿದೆ, ಪ್ರಾಮಾಣಿಕ ಹಿಂದು ಕಾರ್ಯಕರ್ತರ ಹತ್ಯೆಯಾಗ್ತಿರೋದು ಇವರ ಹೊಂದಾಣಿಕೆಯಿಂದ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲು ಶುಕ್ರವಾರ ಕೇಂದ್ರದಿಂದ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದು, ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ. ಇದರ ಭಾಗವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಬಿಜೆಪಿ ಪಕ್ಷದ ರಾಜ್ಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ.
ಈ ನಡುವೆ ವಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕದ ನಾಯಕರಿಗೆ ನೀಡಬೇಕು, ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ. ದಕ್ಷಿಣ ಕರ್ನಾಟಕದವರೇ ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾಟಕದ ಎಷ್ಟು ಶಾಸಕರರು ಇದ್ದಾರೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ. ಅಲ್ಲದೇ, ಬಿಜೆಪಿ ನಾಯಕರ ಬಗ್ಗೆ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ನಾಯಕರ ಬಗ್ಗೆ ಶುಕ್ರವಾರ ಆಗಮಿಸಿದ ಕೇಂದ್ರದ ನಾಯಕರಿಗೂ ದೂರು ಹೇಳಿದ್ದಾರೆ.