ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 82ನೇ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ ರಾಜ್ಯದೆಲ್ಲೆಡೆ ಆಚರಿಸಲು ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.
ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಯಡಿಯೂರಪ್ಪ ಅವರ ಆಯುರಾರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಲು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಂದಾಗಿದ್ದಾರೆ. ಯುವ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಕಾರ್ಯಕರ್ತರು ರಕ್ತದಾನ ಶಿಬಿರ, ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಮಧ್ಯಾಹ್ನದವರೆಗೆ ಯಡಿಯೂರಪ್ಪ ಅವರು ತಮ್ಮ ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಲಭ್ಯರಿರುತ್ತಾರೆ. ಬಳಿಕ ಅವರು ಮಂಡ್ಯ ಜಿಲ್ಲೆಯ ಬೂಕನಕೆರೆಗೆ ತೆರಳುವರು ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.