ಕೋಲ್ಕತಾ: ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ವಿಷಯವನ್ನು ಎತ್ತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ನನ್ನ ಜೀವಿತಾವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅದನ್ನು ಜಾರಿಗೆ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಉತ್ತರ ದಿನಾಜ್‌ಪುರ ಜಿಲ್ಲೆಯ ರಾಯಗಂಜ್‌ನಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿಯು ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿಷಯವನ್ನು ಅವಕಾಶವಾದಿಯಾಗಿ ಎತ್ತಿದೆ”. ಚುನಾವಣೆ ಸಂದರ್ಭಗಳಲ್ಲೇ ಬಿಜೆಪಿಗೆ ಇಂತಹವೆಲ್ಲಾ ಹೊಳೆಯುತ್ತದೆ. ಚುನಾವಣೆಗಳು ಸಮೀಪಿಸುತ್ತಿರುವಾಗ, ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತೆ ಸಿಎಎ ವಿಷಯವನ್ನು ಕೆದಕಿದೆ. ಆದರೆ ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಹೇಳಿದರು.
ಒಂದು ವಾರದೊಳಗೆ ಸಿಎಎ ದೇಶಾದ್ಯಂತ ಜಾರಿಯಾಗಲಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಏನಿದು ಸಿಎಎ: ಸಿಎಎ ಎಂಬುದು ಪೌರತ್ವ ತಿದ್ದುಪಡಿ ಕಾಯ್ದೆಯಾಗಿದ್ದು, ೨೦೧೯ ರಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವು ಜಾರಿಗೆ ತಂದಿತ್ತು. ಸಿಎಎ ಕಾಯ್ದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡಲು ಅವಕಾಶ ನೀಡುತ್ತದೆ. ಅದರಂತೆ ಡಿಸೆಂಬರ್ ೩೧, ೨೦೧೪ ರ ಮೊದಲು ಭಾರತವನ್ನು ಪ್ರವೇಶಿಸಿದ ಮುಸ್ಲಿಮೇತರ ವಿದೇಶಿ ಪ್ರಜೆಗಳಿಗೆ ಭಾರತೀಯ ಪೌರತ್ವ ನೀಡುವ ಕಾನೂನು ಇದಾಗಿದೆ ಎಂದು ಹೇಳಲಾಗಿದೆ.