ಹಾಸನ: ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಟ್ರಕ್ ದುರಂತ ರಾಜ್ಯವನ್ನೆಲ್ಲ ಬೆಚ್ಚಿಬಿಟ್ಟಿದ್ದು, 9 ಮಂದಿ ದುರ್ಮರಣಕ್ಕೀಡಾಗಿದ್ದು, ಇಡೀ ಹಾಸನ ಜಿಲ್ಲೆ ಶೋಕಸಾಗರದಲ್ಲಿ ಮುಳುಗಿದಂತಾಗಿದೆ.
ಘಟನೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು, ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಆವಶ್ಯಕ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಸೂಚನೆ ನೀಡಿದರು.
ಈ ದುರಂತಕ್ಕೆ ತೀವ್ರ ಸ್ಪಂದನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳಿಗೆ ಖಡಕ್ ನಿರ್ದೇಶನೆಗಳನ್ನು ನೀಡಿದ್ದಾರೆ. ಅವರು ಘಟನೆಯ ನಂತರದಿಂದಲೇ ಜಿಲ್ಲಾ ಆಡಳಿತ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಜಿಲ್ಲಾಡಳಿತ ರಾತ್ರಿಯಿಡೀ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಮೃತರ ಮರಣೋತ್ತರ ಪರೀಕ್ಷೆ ಕೂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯಲ್ಲಿಯೇ ಪೂರ್ಣಗೊಳಿಸಿ, ಮೃತದೇಹಗಳನ್ನು ಶೀಘ್ರವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.
ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಕಲ್ಪಿಸಲಾಗುತ್ತಿದ್ದು, ಜಿಲ್ಲಾ ವೈದ್ಯಾಧಿಕಾರಿ ನೇರವಾಗಿ ಚಿಕಿತ್ಸೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ನಿಗದಿತ ವೈದ್ಯರ ತಂಡ ನಿಯೋಜಿಸಲಾಗಿದೆ.
ಸಚಿವ ಕೃಷ್ಣ ಬೈರೇಗೌಡ ಅವರು ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ, ಮೃತರ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಪರಿಹಾರದ ಚೆಕ್ ವಿತರಣೆ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.