Friday, April 4, 2025
Google search engine

Homeರಾಜ್ಯಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಿ: ಸಿಎಂ ಸಿದ್ದರಾಮಯ್ಯ

ಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕಾಗಿ ೫೪,೩೭೪ ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇಂದು ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆಕೆಆರ್‌ಡಿಬಿಯಡಿ ಕಳೆದ ವರ್ಷದ ೨,೦೦೦ ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ ೩,೦೦೦ ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಇಲಾಖೆಯಲ್ಲಿ ೧ ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು ೧೨,೦೦೦ ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕೆ ೪೬,೯೫೫ ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ ೫೪,೩೭೪ ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕ ಆಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಸೂಚಿಸಿದರು. ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಎನ್. ಎಸ್. ಬೋಸರಾಜು, ಡಿ. ಸುಧಾಕರ್, ರಹೀಂ ಖಾನ್, ಬೈರತಿ ಸುರೇಶ್, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular