Friday, April 18, 2025
Google search engine

Homeರಾಜ್ಯಜಾತಿ ದೌರ್ಜನ್ಯ: ಜಾಮೀನು ಸಿಗದಂತೆ ಕ್ರಮ: ಸರ್ಕಾರಿ ಅಭಿಯೋಜಕರಿಗೆ ಸಿಎಂ ಸೂಚನೆ

ಜಾತಿ ದೌರ್ಜನ್ಯ: ಜಾಮೀನು ಸಿಗದಂತೆ ಕ್ರಮ: ಸರ್ಕಾರಿ ಅಭಿಯೋಜಕರಿಗೆ ಸಿಎಂ ಸೂಚನೆ

ಬೆಂಗಳೂರು: ಜಾತಿ ದೌರ್ಜನ್ಯ, ನಿಂದನೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಸುಲಭವಾಗಿ ಜಾಮೀನು ಸಿಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರಕಾರಿ ಅಭಿಯೋಜಕರಿಗೆ ಸೂಚನೆ ನೀಡಿದ್ದಾರೆ.

ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿಯೊಂದಿಗೆ ಸಭೆ ನಡೆಸಿದ ಅವರು, ಸರಕಾರಿ ಪ್ರಾಸಿಕ್ಯೂಟರ್‍ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ೬೦ ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್(ಎಜಿ) ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿ ಇನ್ನೂ ೬೬೫ ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ, ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಲೇಬೇಕು. ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಆರೋಪಪಟ್ಟಿ ಶೀಘ್ರವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸರಕಾರಿ ಪ್ರಾಸಿಕ್ಯೂಟರ್‍ಗಳು ಹಾಗೂ ಪೊಲೀಸ್ ಇಲಾಖೆಯವರಿಗೆ ಸೂಚಿಸಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಹೆಚ್ಚಾಗಿಲ್ಲ. ಈ ಕಾರಣಕ್ಕೆ ಪ್ರತಿ ಜಿಲ್ಲೆಯಲ್ಲಿ ಡಿಸಿಆರಿ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಪರಿಶೀಲನೆ ನಡೆಸಬೇಕು. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ ೩ ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು ೧೮ ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಶಿಕ್ಷೆಯ ಪ್ರಮಾಣ ಹೆಚ್ಚಿಸಿ: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ೨೦೨೦ರಲ್ಲಿ ಶೇ.೧೦ ರಷ್ಟಿದ್ದುದು, ಪ್ರಸ್ತುತ ಶೇ.೭ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ.೧೦ಕ್ಕೂ ಮೇಲೆ ಹೆಚ್ಚಿಸಬೇಕು. ಈ ಬಗ್ಗೆ ಸರಕಾರಿ ಪ್ರಾಸಿಕ್ಯೂಟರ್‍ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು ಅಧಿಕಾರಿಗಳು ಹಾಗೂ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀಘ್ರ್ರ ನ್ಯಾಯದಾನಕ್ಕೆ ಕ್ರಮ ವಹಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES
- Advertisment -
Google search engine

Most Popular