ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿರುವ ಮಂಡ್ಯ ರೈತರು, ಜೊತೆಗೆ ಪಟ್ಟಣದ ಹಳೆಯ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು , ಮತ್ತೆ ನೀರು ಬಿಡದಂತೆ ನಿರಂತರ ಧರಣಿ ನಡೆಸುತ್ತಿದ್ದ ರೈತ ಸಂಘ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ, ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.