ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅನ್ನದಾತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯ ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿ ೯೭.೦೮ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಇಂತಹ ಸಂದರ್ಭದಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ಪ್ರಾಧಿಕಾರ ಆದೇಶ ಮಾಡಿದೆ. ಈ ಆದೇಶಕ್ಕೆ ಮಣಿದಿರುವ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದು ರೈತರು, ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣ.