ಚಿತ್ರದುರ್ಗ: ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ಮಾಡುವುದನ್ನು ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಡೆಗಟ್ಟಬೇಕು ಎಂದರು.
ನಿಷೇಧಿತ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಸರ ಅಧಿಕಾರಿಗಳು ನಿಗಾ ವಹಿಸಬೇಕು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಊರು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ವಾಹನಗಳ ಮೂಲಕ ಪಿಓಪಿ ಗಣಪತಿ ವಿಗ್ರಹಗಳ ಸಾಗಾಣಿಕೆ ತಡೆಯಲು ಚೆಕ್ ಪೋಸ್ಟ್‍ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಪಿಓಪಿ ಗಣಪತಿ ಮಾರಾಟ ಮಾಡುವ ಅಂಗಡಿಗಳಿಗೆ ಲೈಸೆನ್ಸ್ ನೀಡಬಾರದು. ಅಕ್ರಮವಾಗಿ ನಿಷೇಧಿತ ಗಣಪತಿ ವಿಗ್ರಹಗಳ ಮಾರಾಟ ಕಂಡುಬಂದರೆ ತಕ್ಷಣವೇ ಅಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಬೇಕು, ಅಲ್ಲದೆ ಸುಪರ್ದಿಗೆ ಪಡೆದ ನಿಷೇಧಿತ ವಿಗ್ರಹಗಳನ್ನು ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.
ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಪ್ರತಿಯೊಬ್ಬರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅನುಮತಿ ನೀಡುವ ಸಂದರ್ಭದಲ್ಲಿ ನಿಷೇದಿತ ಪಿಒಪಿ ಹಾಗೂ ಆಯಿಲ್ ಪೇಂಟಿಗ್ ಗಣೇಶ ಮೂರ್ತಿಗಳು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನಿರ್ಬಂಧ ಹೇರಬೇಕು. ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಕೋಮು ಸೌಹಾರ್ಧತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಶಾಂತಿ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು