Friday, March 13, 2026
Google search engine

Homeರಾಜ್ಯತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ: ಸೋಮವಾರದಿಂದ ಖರೀದಿಗೆ ಸೂಚನೆ

ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ: ಸೋಮವಾರದಿಂದ ಖರೀದಿಗೆ ಸೂಚನೆ

ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಉಂಟಾಗಿರುವ ಬೆಲೆ ಕುಸಿತದ ಬಗ್ಗೆ ಸಚಿವ ಗೋಯಲ್ ಅವರಿಗೆ ವಿವರವಾಗಿ ಮನವರಿಕೆ ಮಾಡಿಕೊಡಲಾಯಿತು. ಬೆಳೆಗಾರರ ಎಲ್ಲಾ ಮನವಿಗಳನ್ನು ಆಲಿಸಿದ ಸಚಿವರು, ಅವುಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರದಿಂದಲೇ ತಂಬಾಕು ಖರೀದಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದ್ದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಹೆಚ್ಚಿಸುವುದು ಹಾಗೂ ಹೊಸ ದೇಶಗಳಲ್ಲಿ ಮಾರುಕಟ್ಟೆ ಅವಕಾಶಗಳನ್ನು ಹುಡುಕುವ ಬಗ್ಗೆ ಕೂಡ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಪ್ರಮುಖ ಉದ್ಯಮ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ಬೆಳೆಗಾರರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಮೈಸೂರು–ಕೊಡಗು ಸಂಸದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಮಹದೇವು ಮತ್ತು ಅಶ್ವಿನ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಭೆಯ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಾ.ರಾ. ಮಹೇಶ್, ಸೋಮವಾರದಿಂದ ತಂಬಾಕು ಖರೀದಿಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 190 ದೇಶಗಳ ರಾಯಭಾರಿಗಳಿಗೆ ಪತ್ರ ಬರೆದು ಮುಕ್ತ ಮಾರುಕಟ್ಟೆಯಲ್ಲಿ ತಂಬಾಕು ಖರೀದಿಗೆ ಮನವಿ ಮಾಡುವುದಾಗಿ ಹಾಗೂ ಹೊಸ ದೇಶಗಳಿಗೆ ರಫ್ತು ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಸಚಿವರು ಹೇಳಿದ್ದಾರೆ ಎಂದರು.

ಇತ್ತೀಚೆಗೆ ತಂಬಾಕು ಖರೀದಿ ಸ್ಥಗಿತಗೊಂಡ ಪರಿಣಾಮ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಕ್ವಿಂಟಾಲ್‌ಗೆ ಸುಮಾರು 320 ರೂಪಾಯಿಯಿಂದ 250 ರೂಪಾಯಿವರೆಗೆ ಇಳಿಕೆಯಾಗಿದೆ. ಈ ಹಿನ್ನೆಲೆ ಬೆಲೆ ಹೆಚ್ಚಿಸುವುದು ಮತ್ತು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಅವರು ಹೇಳಿದರು.

ಶಾಸಕ ಎ. ಮಂಜು ಮಾತನಾಡಿ, ಕರ್ನಾಟಕದಲ್ಲಿ ಈ ವರ್ಷ ಸುಮಾರು 80 ದಶಲಕ್ಷ ಟನ್ ತಂಬಾಕು ಉತ್ಪಾದನೆಯಾಗಿದ್ದು, ರೈತರು ಬೆಳೆದ ಬೆಳೆವನ್ನು ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿ ಖರೀದಿ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular